ADVERTISEMENT

ಕಾಂಗ್ರೆಸ್ಸೇ ಒಂದು ಜಾತಿ: ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 19:11 IST
Last Updated 9 ಅಕ್ಟೋಬರ್ 2020, 19:11 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ಬೆಂಗಳೂರು: ‘ಕಾಂಗ್ರೆಸ್ಸೇ ಒಂದು ಜಾತಿ. ಕಾಂಗ್ರೆಸ್‌ ಪಕ್ಷವೇ ನನ್ನ ಜಾತಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

‘ಕಾಂಗ್ರೆಸ್‌ ಪಕ್ಷದವರು ಒಕ್ಕಲಿಗ ಸಮುದಾಯವನ್ನು ಗುತ್ತಿಗೆಗೆ ತೆಗೆದುಕೊಂಡಿದ್ದಾರಾ’ ಎಂಬ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಶಿವಕುಮಾರ್‌, ‘ಯಾವ ಸಮುದಾಯ? ನಾನು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ. ಅವರು ದೊಡ್ಡವರು, ಏನು ಬೇಕಾದರೂ ಮಾತನಾಡಲಿ’ ಎಂದರು.

ಶಿರಾ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪಕ್ಷದ ವೀಕ್ಷಕರು ಎಂದು ಯಾರೂ ಕೆಲಸ ಮಾಡುತ್ತಿಲ್ಲ. ಶಾಸಕರಿರಲಿ, ಮುಖಂಡರಿರಲಿ ಎಲ್ಲರೂ ಕಾರ್ಯಕರ್ತರಾಗಿಯೇ ಕೆಲಸ ಮಾಡುತ್ತಿದ್ದಾರೆ. ತಾವು ಕೂಡ ಕಾರ್ಯಕರ್ತ. ಯಾರೂ ವೀಕ್ಷಣೆ ಮಾಡುವವರು ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ಕೃಷಿ ಸಂಬಂಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಶನಿವಾರದಿಂದ ಆಂದೋಲನ ಆರಂಭವಾಗುತ್ತಿದೆ. ಕೋವಿಡ್‌ ಕಾರಣದಿಂದ ಮಂಡ್ಯದಲ್ಲಿ ಶನಿವಾರ ಸಣ್ಣ ಪ್ರಮಾಣದಲ್ಲಿ ರೈತ ಸಮಾವೇಶ ಆಯೋಜಿಸಲಾಗಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಶಾಲೆಗಳ ಆರಂಭದ ಕುರಿತು ರಾಜ್ಯ ಸರ್ಕಾರವು, ಪೋಷಕರು, ಮಕ್ಕಳು ಮತ್ತು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜತೆ ಚರ್ಚಿಸಿ ನಿರ್ಧಾರಕ್ಕೆ ಬರಲಿ. ಸರ್ಕಾರಕ್ಕೆ ಸಂಬಂಧಿಸಿದ ಈ ವಿಷಯದಲ್ಲಿ ತಾವು ಮಧ್ಯಪ್ರವೇಶಿಸಲು ಬಯಸುವುದಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.