ADVERTISEMENT

ಸಂತೋಷ್‌ ‍ಸಾವು: ನಿಷ್ಪಕ್ಷಪಾತ ತನಿಖೆಯಾಗಲಿ– ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 16:40 IST
Last Updated 12 ಏಪ್ರಿಲ್ 2022, 16:40 IST
ಡಿ. ಕೆಂಪಣ್ಣ
ಡಿ. ಕೆಂಪಣ್ಣ   

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ‍ಪಾಟೀಲ ಸಾವಿನ ಪ್ರಕರಣದ ಕುರಿತು ರಾಜ್ಯ ಸರ್ಕಾರ ಉನ್ನತಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಒತ್ತಾಯಿಸಿದರು.

ಘಟನೆ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಬಿಲ್‌ ಮೊತ್ತ ಬಿಡುಗಡೆ ಮಾಡಲು ಸಚಿವರು ಶೇ 40ರಷ್ಟು ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರ ಬೆಳವಣಿಗೆ. ಈ ಪ್ರಕರಣದಲ್ಲಿ ಸತ್ಯಾಂಶ ಹೊರತರಲು ನಿಷ್ಪಕ್ಷಪಾತ ತನಿಖೆಯಾಗಬೇಕು’ ಎಂದರು.

‘ಮೃತ ಗುತ್ತಿಗೆದಾರ ಕೆಲವು ದಿನಗಳ ಹಿಂದೆ ನನ್ನ ಜತೆ ದೂರವಾಣಿ ಮೂಲಕ ಮಾತನಾಡಿದ್ದರು. ಈಶ್ವರಪ್ಪ ಅವರ ಪುತ್ರನಿಗೆ ಒಂದಷ್ಟು ಹಣ ನೀಡಿದ್ದು, ಇನ್ನೂ ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ವಿಷಯ ತಿಳಿಸಿದ್ದರು. ಸಂತೋಷ್‌ ಪಾಟೀಲ ಸಚಿವರ ವಿರುದ್ಧ ಆರೋಪ ಮಾಡಿರುವ ಕುರಿತು ಮಾರ್ಚ್‌ 11ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದೆ. ಅವರು ಪ್ರತಿಕ್ರಿಯೆಯನ್ನೇ ನೀಡಿರಲಿಲ್ಲ’ ಎಂದು ಹೇಳಿದರು.

ADVERTISEMENT

ಲಂಚಕ್ಕಾಗಿ ಬೇಡಿಕೆ ಇಟ್ಟು, ಹಿಂಸೆ ಕೊಟ್ಟಿರುವುದೇ ಗುತ್ತಿಗೆದಾರನ ಸಾವಿಗೆ ಕಾರಣ. ಈ ಬಗ್ಗೆ ಸಮಗ್ರವಾದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.