ADVERTISEMENT

ದಲಿತರಿಗೆ ಸಿ.ಎಂ ಸ್ಥಾನ: ಸತೀಶ ಜಾರಕಿಹೊಳಿ ಮನೆ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2025, 15:48 IST
Last Updated 6 ನವೆಂಬರ್ 2025, 15:48 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

– ಪ್ರಜಾವಾಣಿ ಚಿತ್ರ

‌ಬೆಂಗಳೂರು: ದಲಿತ ಸಮುದಾಯದವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಆದಿ ಜಾಂಬವ ಸಂಘಟನೆಯ ಸದಸ್ಯರು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಸರ್ಕಾರಿ ನಿವಾಸದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ADVERTISEMENT

ದಶಕಗಳಿಂದ ದಲಿತರು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿದ್ದಾರೆ. ಆದರೆ, ಮುಖ್ಯಮಂತ್ರಿ ಸ್ಥಾನ ನೀಡದೆ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಿದರೆ ದಲಿತರಿಗೆ ಆ ಸ್ಥಾನ ಬಿಟ್ಟುಕೊಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಸತೀಶ ಜಾರಕಿಹೊಳಿ, ಜಿ. ಪರಮೇಶ್ವರ, ಎಚ್.ಸಿ. ಮಹದೇವಪ್ಪ, ಪ್ರಿಯಾಂಕ್‌ ಖರ್ಗೆ, ಶಿವರಾಜ್ ತಂಗಡಗಿ, ಮಾಜಿ ಸಚಿವ ಕೆ.ಎನ್‌. ರಾಜಣ್ಣ ಅವರ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದರು.

ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಪ್ರತಿಭಟನಕಾರರು ಪ್ರಯತ್ನಿಸಿದರೂ ಪೊಲೀಸರು ಅನುಮತಿ ನೀಡಲಿಲ್ಲ. ಆಗ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಕಾಂಗ್ರೆಸ್‌ ಹೈಕಮಾಂಡ್‌ ನಾಯಕರು ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಚಳವಳಿಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.

ಸತೀಶ ಜಾರಕಿಹೊಳಿ ಅವರೇ ಬಂದು ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿದರು. ಸಂಘಟನೆಯ ಬೇಡಿಕೆಯನ್ನು ವರಿಷ್ಠರ ಗಮನಕ್ಕೆ ತರಲಾಗುವುದು ಎಂದೂ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.