ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಆದೇಶಗಳನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಏ.2ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಹೈಕೋರ್ಟ್ ನಿಯಮಿತ ಜಾಮೀನು ಮಂಜೂರು ಮಾಡಿತ್ತು. ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ನಿಯಮಿತ ಜಾಮೀನು ಆದೇಶಗಳನ್ನು ಪ್ರಶ್ನಿಸಿ ಹಿರಿಯ ವಕೀಲ ಅನಿಲ್ ನಿಶಾನಿ ಅವರು ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಮಂಗಳವಾರ ನಡೆಯಬೇಕಿತ್ತು. ಆದರೆ, ವಿಚಾರಣೆಯ ಪಟ್ಟಿಯಲ್ಲಿ ಇರಲಿಲ್ಲ. ಪ್ರಕರಣದ ವಿಚಾರಣೆ ನಡೆಸುವಂತೆ ನಿಶಾನಿ ಮನವಿ ಮಾಡಿದರು. ಏ.2ರಂದು ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠ ತಿಳಿಸಿತು.
2024ರ ಡಿ.13ರಂದು ಹೈಕೋರ್ಟ್ ಏಕಸದಸ್ಯ ಪೀಠ ದರ್ಶನ್, ಪವಿತ್ರಗೌಡ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಜೂನ್ 8ರಂದು ಚಿತ್ರದುರ್ಗದ ರೇಣುಕಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ ಆರೋಪದಡಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.