
ಧನ್ವೀರ್
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ವಿಶೇಷ ಆತಿಥ್ಯ ನೀಡಿದ್ದ ಪ್ರಕರಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದ ವಿಡಿಯೊಗಳಿಗೆ ಸಂಬಂಧಿಸಿದಂತೆ ದರ್ಶನ್ ಆಪ್ತ ನಟ ಧನ್ವೀರ್ ಅವರು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಜೈಲಿನಿಂದ ಬಿಡುಗಡೆಯಾಗಿದ್ದ ಕೈದಿಯಿಂದ ವಿಡಿಯೊ ಹಾಗೂ ಫೋಟೊಗಳನ್ನು ಪಡೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಅನುಮಾನದ ಅಡಿ ಧನ್ವೀರ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ‘ದರ್ಶನ್ ಅವರಿಗೆ ಜೈಲಾಧಿಕಾರಿಗಳು ಹಾಸಿಗೆ ದಿಂಬು ನೀಡಿರಲಿಲ್ಲ. ಅವರು ಹಾಸಿಗೆ ದಿಂಬು ಪಡೆದುಕೊಳ್ಳಲು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅಲ್ಲೂ ಹಿನ್ನಡೆ ಆಗಿತ್ತು. ಅದೇ ಕಾರಣಕ್ಕೆ ಜೈಲಿನ ಒಳಗೆ ನಡೆಯುತ್ತಿರುವ ಅಕ್ರಮಗಳ ಕುರಿತು ವಿಡಿಯೊವನ್ನು ಧನ್ವೀರ್ ಅವರು ಜೈಲಿನಿಂದ ಬಿಡುಗಡೆಯಾಗಿದ್ದ ಕೈದಿಯಿಂದ ಪಡೆದು ಬಹಿರಂಗಪಡಿಸಿದ್ದಾರೆ ಎಂಬ ಅನುಮಾನದ ಮೇರೆಗೆ ಕಳೆದ ವಾರವು ವಿಚಾರಣೆ ನಡೆಸಲಾಗಿತ್ತು. ಎರಡನೇ ಬಾರಿ ಮತ್ತೆ ವಿಚಾರಣೆ ನಡೆಸಲಾಗಿದೆ’ ಎಂದು ಮೂಲಗಳು ಹೇಳಿವೆ.
ವಕೀಲರೊಬ್ಬರು ವಿಡಿಯೊಗಳನ್ನು ನನಗೆ ಕಳುಹಿಸಿದ್ದರು. ಆ ವಿಡಿಯೊಗಳನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕಳುಹಿಸಿದ್ದೆ. ನಾನು ಯಾವುದೇ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿಲ್ಲ’ ಎಂಬುದಾಗಿ ಧನ್ವೀರ್ ಅವರು ವಿಚಾರಣೆ ವೇಳೆ ತಿಳಿಸಿದ್ದಾರೆ’ ಎಂದು ಗೊತ್ತಾಗಿದೆ. ‘ವಿಜಯಲಕ್ಷ್ಮಿ ಅವರ ವಿಚಾರಣೆಗೆ ಹಿರಿಯ ಅಧಿಕಾರಿಗಳು ಅನುಮತಿ ನೀಡಿದ್ದಾರೆ. ಅವರಿಗೂ ನೋಟಿಸ್ ಜಾರಿ ಮಾಡಿ ಹೇಳಿಕೆ ದಾಖಲು ಮಾಡಿಕೊಳ್ಳಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.