ಬೆಂಗಳೂರಿನ ಸೆಂಟ್ಸ್ ಜಾನ್ಸ್ ಸಭಾಂಗಣದಲ್ಲಿ ಬುಕ್ ಬ್ರಹ್ಮ ಸಾಹಿತ್ಯ ಉತ್ಸವದಲ್ಲಿ ಬೂಕರ್ ಪ್ರಶಸ್ತಿಯಾಚೆ: ಭಾರತೀಯ ಕಥೆಗಳ ಭವಿಷ್ಯ ಕುರಿತು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಸಂವಾದ ನಡೆಸಿದರು. ಪ್ರಜಾವಾಣಿ ಸಂಗ್ರಹ ಚಿತ್ರ. ಪ್ರಶಾಂತ್ ಎಚ್.ಜಿ.
ಬೆಂಗಳೂರು: ನಾಡಹಬ್ಬ ದಸರಾ ಉತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
"ಬಾನು ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು" ಎಂದು ಕೋರಿರುವ ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಅರ್ಜಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.
ಅರ್ಜಿಯಲ್ಲಿ ಏನಿದೆ?
"ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವುದು ತಪ್ಪು. ಬಾನು ಅವರ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು ಮೂಲಭೂತವಾಗಿ ವಿಭಿನ್ನವಾಗಿವೆ. ಅವರು ಈ ಹಿಂದೆ ಹಿಂದೂ ಮತ್ತು ಕನ್ನಡ ವಿರೋಧಿ ಹೇಳಿಕೆ ನೀಡಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಿದ್ದಾರೆ. ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿಲುವು ಸಂವಿಧಾನದ 25 ಮತ್ತು 26ನೇ ವಿಧಿಯಡಿ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಉಲ್ಲಂಘನೆ. ಆದ್ದರಿಂದ, ಅವರಿಗೆ ನೀಡಲಾಗಿರುವ ಆಹ್ವಾನವನ್ನು ಹಿಂಪಡೆಯಲು ಸರ್ಕಾರಕ್ಕೆ ನಿರ್ದೇಶಿಸಬೇಕು" ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರತಾಪ ಸಿಂಹ ಪರ ಹೈಕೋರ್ಟ್ ವಕೀಲರಾದ ಸುದರ್ಶನ ಸುರೇಶ್, ಡಿ.ಎಂ.ಸಾಯಿನಾಥ, ನೇಹಾ ವೆಂಕಟೇಶ್ ಮತ್ತು ಡಿ.ಎಸ್.ಸೌಮ್ಯ ವಕಾಲತ್ತು ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.