ADVERTISEMENT

ನೀರು ಬಿಡುಗಡೆ: ಕರ್ನಾಟಕ–ಮಹಾರಾಷ್ಟ್ರ ನಡುವೆ ಮಾಹಿತಿ ವಿನಿಮಯಕ್ಕೆ ಒಪ್ಪಿಗೆ

ಕರ್ನಾಟಕ– ಮಹಾರಾಷ್ಟ್ರ ರಾಜ್ಯದ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 20:43 IST
Last Updated 19 ಜೂನ್ 2021, 20:43 IST
ಸಭೆಯಲ್ಲಿ ಭಾಗವಹಿಸಲು ಬಂದ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತಿಸಿದರು. ಬಸವರಾಜ ಬೊಮ್ಮಾಯಿ ಇದ್ದರು
ಸಭೆಯಲ್ಲಿ ಭಾಗವಹಿಸಲು ಬಂದ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತಿಸಿದರು. ಬಸವರಾಜ ಬೊಮ್ಮಾಯಿ ಇದ್ದರು   

ಬೆಂಗಳೂರು: ‘ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ನಡುವೆ ಮಳೆ ಪ್ರಮಾಣ, ಜಲಾಶಯಗಳಿಂದ ನೀರು ಬಿಡುಗಡೆ ಕುರಿತಂತೆ ಕ್ಷಣಕ್ಷಣದ (ರಿಯಲ್‌ ಟೈಮ್‌ ಡಾಟಾ) ಮಾಹಿತಿ ಹಂಚಿಕೊಳ್ಳಲು ತೀರ್ಮಾನಿಸ
ಲಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಮುಖ್ಯಮಂತ್ರಿ ನೇತೃತ್ವದಲ್ಲಿ ಕರ್ನಾಟಕ– ಮಹಾರಾಷ್ಟ್ರ ರಾಜ್ಯದ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿಯ ಸಭೆ ಶನಿವಾರ ನಡೆಯಿತು. ಮಹಾರಾಷ್ಟ್ರದ ಜಲ ಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ಸಭೆಯ ಬಳಿಕ ಮಾತನಾಡಿದ ಯಡಿಯೂರಪ್ಪ, ‘ಕೃಷ್ಣಾ ಮತ್ತು ಭೀಮಾ ನದಿಯ ಜಲಾನಯನ ಪ್ರದೇಶದಲ್ಲಿ ಪ್ರವಾಹವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದೂ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಎರಡೂ ರಾಜ್ಯಗಳ ನಡುವೆ ಸಚಿವರು, ಕಾರ್ಯದರ್ಶಿಗಳ ಹಂತ ಹಾಗೂ ಕೆಳಹಂತದ ಅಧಿಕಾರಿಗಳ ನಡುವೆ ಉತ್ತಮ ಸಂವಹನ, ಸಮನ್ವಯ ಸಾಧಿಸಲು ತೀರ್ಮಾನಿಸಲಾಯಿತು’ ಎಂದರು.

ADVERTISEMENT

‘ಉಭಯ ರಾಜ್ಯಗಳ ಜಂಟಿ ಯೋಜನೆಯಾದದೂಧ್ ಗಂಗಾ ಯೋಜನೆ, ಅನೇಕ ವರ್ಷಗಳಿಂದ ನನೆಗುದಿಯಲ್ಲಿದೆ. ಈ ಯೋಜನೆಯನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲು ಮಹಾರಾಷ್ಟ್ರ ಸರ್ಕಾರ ಒಪ್ಪಿದೆ’ ಎಂದರು.

‘ಬೇಸಿಗೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 4 ಟಿಎಂಸಿ ಅಡಿ ನೀರು ಹಾಗೂ ಮಳೆಗಾಲದಲ್ಲಿ ಮಹಾರಾಷ್ಟ್ರಕ್ಕೆ ರಾಜ್ಯದಿಂದ ಅಷ್ಟೇ ಪ್ರಮಾಣದ ನೀರು ಒದಗಿಸುವ ಕುರಿತು ಎರಡೂ ರಾಜ್ಯಗಳ ತಾಂತ್ರಿಕ ಸಮಿತಿ ರಚಿಸಲು ಕೂಡಾ ಸಭೆಯಲ್ಲಿ ತೀರ್ಮಾನಿಸಲಾಯಿತು’ ಎಂದು ಯಡಿಯೂರಪ್ಪ ತಿಳಿಸಿದರು.

ಅಂತಿಮ ಅಧಿಸೂಚನೆಗೆ ಜಂಟಿ ಪ್ರಯತ್ನ

‘ಕೃಷ್ಣಾ ನದಿ ನೀರು ಹಂಚಿಕೆ ಕುರಿತಂತೆ ಬ್ರಿಜೇಶ್ ಮಿಶ್ರಾ ನ್ಯಾಯಾಧೀಕರಣ ನೀಡಿರುವ ಐ ತೀರ್ಪಿನ ಕುರಿತು ಅಂತಿಮ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟಿನಲ್ಲಿ ಜಂಟಿ ಹೋರಾಟಕ್ಕೆ ಕರ್ನಾಟಕ ಮತ್ತು ಮಹಾರಾಷ್ಟ್ರ ನಿರ್ಧರಿಸಿವೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಅಂತಿಮ ಅಧಿಸೂಚನೆ ಪ್ರಕಟಗೊಳ್ಳಬೇಕು ಎಂಬುದು ಕರ್ನಾಟಕ – ಮಹಾರಾಷ್ಟ್ರ ರಾಜ್ಯಗಳ ನಿಲುವಾಗಿದೆ. ಹೀಗಾಗಿ, ಉಭಯ ರಾಜ್ಯಗಳು ಒಟ್ಟಿಗೆ ಕುಳಿತು ಚರ್ಚಿಸಿ, ಆದಷ್ಟು ಬೇಗ ಅಧಿಸೂಚನೆ ಹೊರಡಿಸುವ ಸಲುವಾಗಿ ಸುಪ್ರೀಂಕೋರ್ಟಿನಲ್ಲಿ ಜಂಟಿ ಪ್ರಯತ್ನ ಮಾಡಲು ನಿರ್ಧರಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.