ADVERTISEMENT

ಕೋಮುವಾದಿ, ಜಾತಿವಾದಿ ಬಿಜೆಪಿ ಸೋಲಿಸಿ: ಬಿ. ಮಾಳಮ್ಮ

ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಪ್ರಧಾನ ಕಾರ್ಯದರ್ಶಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2019, 7:33 IST
Last Updated 8 ಏಪ್ರಿಲ್ 2019, 7:33 IST
ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಪ್ರಧಾನ ಕಾರ್ಯದರ್ಶಿ  ಬಿ. ಮಾಳಮ್ಮ
ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಮಾಳಮ್ಮ   

ಹೊಸಪೇಟೆ: ‘ಬರುವ ಲೋಕಸಭೆ ಚುನಾವಣೆಯಲ್ಲಿ ಕೋಮುವಾದಿ, ಜಾತಿವಾದಿ ಬಿಜೆಪಿಯನ್ನು ಮತದಾರರು ಸೋಲಿಸಿ, ಜಾತ್ಯತೀತ ಶಕ್ತಿಗಳನ್ನು ಬೆಂಬಲಿಸಬೇಕು’ ಎಂದು ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಮಾಳಮ್ಮ ಮನವಿ ಮಾಡಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಹಿಂದಿನ ಐದು ವರ್ಷಗಳಲ್ಲಿ ಬಿಜೆಪಿ ಒಂದೇ ಒಂದು ಜನಪರ ಕೆಲಸ ಮಾಡಿಲ್ಲ. ನರೇಂದ್ರ ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಅದರಲ್ಲೂ ಶೋಷಿತ ವರ್ಗದ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಅಭಿವೃದ್ಧಿ ಹೆಸರಲ್ಲಿ ಮತ ಪಡೆದು, ಅಧಿಕಾರಕ್ಕೆ ಬಂದಿದ್ದ ಮೋದಿ ಸರ್ಕಾರ, ಐದು ವರ್ಷಗಳಲ್ಲಿ ಜಾತಿ ಹೆಸರಿನಲ್ಲಿ ಸಮಾಜವನ್ನು ವಿಘಟಿಸುವ ಕೆಲಸ ಬಿಟ್ಟರೆ ಬೇರೇನೂ ಮಾಡಿಲ್ಲ. ಅದೇ ಅವರ ಸಾಧನೆ’ ಎಂದು ಕುಟುಕಿದರು.

‘ಬಿಜೆಪಿ ಸಂಸದರಾದ ಪ್ರತಾಪ್‌ ಸಿಂಹ, ಅನಂತಕುಮಾರ ಹೆಗಡೆ, ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಬಹಿರಂಗವಾಗಿಯೇ ಸಂವಿಧಾನದ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಇದು ಅವರ ಮನು ಮನಃಸ್ಥಿತಿ ತೋರಿಸುತ್ತದೆ. ಇಂತಹವರು ಅಧಿಕಾರಕ್ಕೆ ಬಂದರೆ ದೇಶದ ಸಂವಿಧಾನ, ಪ್ರಜಾತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಅಪಾಯವಿದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

‘ದೇವದಾಸಿಯರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನವದೆಹಲಿಗೆ ನಿಯೋಗ ಹೋಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಂಡು ಮನವಿ ಸಲ್ಲಿಸಿದ್ದೆವು. ಆದರೆ, ಅವರ ಅಧಿಕಾರದ ಅವಧಿ ಮುಗಿಯುತ್ತ ಬಂದರೂ ಒಂದೇ ಒಂದು ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಹುಸಿಯಾಗಿದೆ. ಬಡವರ ಖಾತೆಗೆ ₹15 ಲಕ್ಷ ಜಮೆ ಮಾಡಿಲ್ಲ. ನೋಟು ಅಮಾನ್ಯೀಕರಣದಿಂದ ಬಡವರು, ಮಧ್ಯಮ ವರ್ಗದವರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸ್ವಾಮಿನಾಥನ್‌ ಆಯೋಗದ ವರದಿ ಜಾರಿಗೆ ತಂದಿಲ್ಲ. ಕಾರ್ಮಿಕರಿಗೆ ಕನಿಷ್ಠ ಕೂಲಿ ನಿಗದಿಪಡಿಸಿಲ್ಲ. ಇದು ಮೋದಿ ಸರ್ಕಾರದ ವೈಫಲ್ಯಗಳ ಪಟ್ಟಿ’ ಎಂದು ವಿವರಿಸಿದರು.

ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಜಂಬಯ್ಯ ನಾಯಕ ಮಾತನಾಡಿ, ‘ಲೋಕಸಭೆ ಚುನಾವಣೆಯಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ, ರೈತರಿಗೆ ಬೆಂಬಲ ಬೆಲೆ, ದೇಶದಲ್ಲಿ ಸೌಹಾರ್ದ ವಾತಾವರಣ ಸೃಷ್ಟಿಸುವ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ.

ಪಾಕಿಸ್ತಾನದ ಮೇಲೆ ದಾಳಿ ನಡೆಸಿದ ವಿಷಯವೇ ದೊಡ್ಡದಾಗಿದೆ. ಬಹುತೇಕ ಮಾಧ್ಯಮಗಳು ಮೋದಿ ವೈಭವೀಕರಿಸಿ ಸುದ್ದಿ ಬಿತ್ತರಿಸಿ, ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾಯಕಾರಿ ಬೆಳವಣಿಗೆ’ ಎಂದು ಆತಂಕ ವ್ಯಕ್ತಪಡಿಸಿದರು.

ಸಂಘದ ಜಿಲ್ಲಾ ಕಾರ್ಯದರ್ಶಿ ಎ. ಸ್ವಾಮಿ, ಉಪಾಧ್ಯಕ್ಷೆ ದುರುಗಮ್ಮ, ತಾಲ್ಲೂಕು ಅಧ್ಯಕ್ಷೆ ಯಲ್ಲಮ್ಮ, ಮುಖಂಡ ಭಾಸ್ಕರ್‌ ರೆಡ್ಡಿ ಇದ್ದರು.

**

ಎಲ್ಲ ರಂಗಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ವಿಫಲವಾಗಿದೆ. ಪಾಕಿಸ್ತಾನದ ವಿರುದ್ಧ ಸೇನೆ ನಡೆಸಿದ ಸರ್ಜಿಕಲ್‌ ಸ್ಟ್ರೈಕ್‌ ವಿಷಯವನ್ನೇ ಮುಂದಿಟ್ಟುಕೊಂಡು ಮತಯಾಚಿಸುತ್ತಿದೆ.
–ಬಿ. ಮಾಳಮ್ಮ, ಪ್ರಧಾನ ಕಾರ್ಯದರ್ಶಿ ದೇವದಾಸಿ ಮಹಿಳೆಯರ ವಿಮೋಚನಾ ಸಂಘ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.