ADVERTISEMENT

ಪದವಿ ಕಾಲೇಜು ಇಂದಿನಿಂದ ಆರಂಭ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 21:13 IST
Last Updated 25 ಜುಲೈ 2021, 21:13 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು:ಕೋವಿಡ್‌ ಕಾರಣ ಮುಚ್ಚಿದ್ದ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಸೋಮವಾರದಿಂದ (ಜುಲೈ 26) ಪುನರಾರಂಭಗೊಳ್ಳಲಿವೆ.

ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್‌ ಲಸಿಕೆಯ ಮೊದಲ ಡೋಸ್‌ ಪಡೆದಿರಬೇಕು. ಕಾಲೇಜಿನ ಪ್ರವೇಶದ್ವಾರದ ಬಳಿಯೇ ವಿದ್ಯಾರ್ಥಿಗಳ ಲಸಿಕಾ ಪ್ರಮಾಣಪತ್ರ ಪರಿಶೀಲಿಸಿ ಪ್ರವೇಶ ನೀಡಲಾಗುತ್ತದೆ. ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು ಕಾಲೇಜಿಗೆ ಬರುವ 72 ಗಂಟೆಯ ಮೊದಲು ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿರಬೇಕು.

ಈ ಬಗ್ಗೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಜಾರಿ ಮಾಡಿದೆ. ಎಲ್ಲ ವಿಶ್ವವಿದ್ಯಾಲಯಗಳ ಅಡಿಯಲ್ಲಿರುವ ಕಾಲೇಜುಗಳು ಈ ಮಾರ್ಗಸೂಚಿಗಳನ್ನು ಪಾಲಿಸಲೇಬೇಕು.

ADVERTISEMENT

ಈ ಬಗ್ಗೆ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ‘ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಈಗಾಗಲೇ ಆದೇಶ ಹೊರಡಿಸಲಾಗಿದೆ’ ಎಂದಿದ್ದಾರೆ.

‘ಕೋವಿಡ್ ಮಾರ್ಗಸೂಚಿಯ ಪ್ರಾಥಮಿಕ ಶಿಷ್ಟಾಚಾರದಂತೆ ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡುವುದು, ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ. ನಿತ್ಯವೂ ತರಗತಿ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಬೇಕು. ಅಲ್ಲದೆ, ವಿದ್ಯಾರ್ಥಿಗಳ ಲಸಿಕೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದು, ಆದಷ್ಟು ಬೇಗ ಎಲ್ಲರಿಗೂ ಲಸಿಕೆ ಸಿಗುವಂತೆ ಕ್ರಮ ಕೈಗೊಳ್ಳಲು ಎಲ್ಲ ಕುಲಪತಿಗಳಿಗೆ ಸೂಚನೆ ನೀಡಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.

‘ತರಗತಿಗಳಿಗೆ ಹಾಜರಾಗುವ ಅಥವಾ ಆನ್‌ಲೈನ್‌ ಮೂಲಕ ಕಲಿಯುವ ಆಯ್ಕೆಯನ್ನು ವಿದ್ಯಾರ್ಥಿಗಳಿಗೇ ಬಿಡಲಾಗಿದೆ. ಆದರೆ, ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ’ ಎಂದು ಅವರು ತಿಳಿಸಿದ್ದಾರೆ.

ಶೇ 74ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ: ‘ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ವ್ಯಾಪ್ತಿಗಳಲ್ಲೂ ಲಸಿಕೀಕರಣ ವೇಗವಾಗಿ ನಡೆಯುತ್ತಿದೆ. ಕೆಲವು ವಿಶ್ವವಿದ್ಯಾಲಯಗಳಲ್ಲಿ ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೀಕರಣ ನಡೆದಿದೆ. ಇನ್ನು ಕೆಲವು ವಿಶ್ವವಿದ್ಯಾಲಯಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಈ ಬಗ್ಗೆ ಕ್ರಮ ವಹಿಸಲು ಆಯಾ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ತಿಳಿಸಲಾಗಿದೆ. ಈವರೆಗೆ ಶೇ 74ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಕೆಲವೇ ದಿನಗಳಲ್ಲೇ ಉಳಿದ ಎಲ್ಲ ವಿದ್ಯಾರ್ಥಿಗಳಿಗೂ ಆದ್ಯತೆಯ ಮೇರೆಗೆ ಲಸಿಕೆ ಹಾಕಿಸಲಾಗುವುದು’ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.