ADVERTISEMENT

‘ತಳವಾರ, ಪರಿವಾರ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ತಕ್ಷಣ ಅಧಿಸೂಚನೆ ಹೊರಡಿಸಿ’

​ಪ್ರಜಾವಾಣಿ ವಾರ್ತೆ
Published 26 ಮೇ 2020, 19:33 IST
Last Updated 26 ಮೇ 2020, 19:33 IST

ಬೆಂಗಳೂರು: ತಳವಾರ ಮತ್ತು ಪರಿವಾರ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಕೇಂದ್ರ ಸರ್ಕಾರ ಎರಡು ತಿಂಗಳ ಹಿಂದೆಯೇ ಅಧಿಸೂಚನೆ ಹೊರಡಿಸಿದ್ದರೂ ರಾಜ್ಯ ಸರ್ಕಾರ ತನ್ನ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿಲ್ಲ. ತಕ್ಷಣ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ. ಕಾರಜೋಳ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲೆಗಳಿಗೆ ಜಾತಿ ಪ‍್ರಮಾಣ ಅಗತ್ಯವಾಗಿದೆ. ಅಲ್ಲದೆ, ಕೆಪಿಎಸ್‌ಸಿ ಮತ್ತು ಇತರ ನೇಮಕಾತಿ ಪ್ರಾಧಿಕಾರಗಳು ವಿವಿಧ ನೇಮಕಾತಿಗಳಿಗೆ ಅಧಿಸೂಚನೆ ಹೊರಡಿಸುತ್ತಿವೆ. ಈಗಾಗಲೇ ಹೊರಡಿಸಿದ ಅಧಿಸೂಚನೆಗಳಲ್ಲಿ ಈ ಎರಡು ಪಂಗಡಗಳನ್ನು ಪರಿಶಿಷ್ಟ ಪಂಗಡವೆಂದು ಪರಿಗಣಿಸಿ ನೇಮಕಾತಿ ಮಾಡಬೇಕು ಎಂದೂ ಪತ್ರದಲ್ಲಿ ಅವರು ಒತ್ತಾಯಿಸಿದ್ದಾರೆ.

ಈ ಎರಡೂ ಪಂಗಡಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಕೇಂದ್ರಕ್ಕೆ 2014ರ ಫೆ. 25ರಂದೇ ಪತ್ರ ಬರೆಯಲಾಗಿತ್ತು. ಆದರೆ, ಆರು ವರ್ಷಗಳ ಬಳಿಕ ಇದೇ ಮಾರ್ಚ್‌ 19ರಂದು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಿದೆ. ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸುವ ಮೂಲಕ ತಳಮಟ್ಟದ ಸಮುದಾಯದ ಪರ ನಿಲ್ಲಬೇಕು ಎಂದೂ ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.