ಮಡಿಕೇರಿ: ‘ಆರ್‌ಎಸ್‌ಎಸ್‌ನ ದೇಶಭಕ್ತಿ ಸಂಸ್ಕೃತಿ ಅರಿಯದೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಟಿಪ್ಪು ವಂಶಸ್ಥ ಇರಬೇಕು’ ಎಂದು ಶಾಸಕ ಕೆ.ಜಿ.ಬೋಪಯ್ಯ ಅವರು ಟೀಕಿಸಿದರು.
ಸಿದ್ದರಾಮಯ್ಯ ಅವರು ಈಚೆಗೆ ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ಗೆ ಹೋಲಿಸಿ ಟೀಕಿಸಿದ್ದರು. ಅದಕ್ಕೆ ಕೆ.ಜಿ.ಬೋಪಯ್ಯ ತಿರುಗೇಟು ನೀಡಿದ್ದು ‘ಟೀಕೆಗಳು ಗಂಭೀರತೆಯಿಂದ ಕೂಡಿರಬೇಕು. ಆದರೆ, ಮಾಜಿ ಮುಖ್ಯಮಂತ್ರಿಯಾಗಿ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ಆರ್‌ಎಸ್ಎಸ್ ಬಗ್ಗೆ ಹಗುರವಾಗಿ ಟೀಕಿಸಿರುವುದು ಖಂಡನೀಯ’ ಎಂದು ಹೇಳಿದರು.
ಸಿದ್ದರಾಮಯ್ಯ ಅವರಿಂದ ಈ ರೀತಿಯ ಹೇಳಿಕೆಯನ್ನೂ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಪದೇ ಪದೇ ಕೀಳುಮಟ್ಟದ ಹೇಳಿಕೆ ನೀಡಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಆಕ್ರೋಶ ಹೊರಹಾಕಿದ ಅವರು ‘ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು.
‘ಮುಂದಿನ ಮುಖ್ಯಮಂತ್ರಿ ನಾನೇ ಎಂದು ಸಿದ್ದರಾಮಯ್ಯ ಕನಸು ಕಾಣುತ್ತಿದ್ದಾರೆ. ಅವರ ಆಸೆ ಈಡೇರುವುದಿಲ್ಲ. ಮುಂದೆಯೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ’ ಎಂದು ಎಚ್ಚರಿಸಿದರು.
‘ರಾಜ್ಯದಲ್ಲಿ ಈಗ ಶಾಂತಿ ನೆಲೆಸಿದೆ. ಆದರೆ, ತಮ್ಮ ರಾಜಕೀಯಕ್ಕೆ ಸಿದ್ದರಾಮಯ್ಯ ಹಿಂದೂ, ಮುಸ್ಲಿಂ ವಿಚಾರವನ್ನು ಪ್ರಸ್ತಾಪ ಮಾಡುತ್ತಾರೆ’ ಎಂದು ಹೇಳಿದರು.
ಕೊಡಗಿನಲ್ಲಿ ದಸರಾ ಉತ್ಸವ ಸಂಪ್ರದಾಯಕ್ಕೆ ಧಕ್ಕೆಯಾಗದಂತೆ ನಡೆಯಬೇಕು ಎಂದು ಹೇಳಿದರು.
ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.