
ಡಿಜಿಪಿ ಕೆ.ರಾಮಚಂದ್ರ ರಾವ್
ಬೆಂಗಳೂರು: ‘ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಕೆ.ರಾಮಚಂದ್ರ ರಾವ್ ಅವರು ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು’ ಎನ್ನಲಾದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೊ ಹರಿದಾಡಿದ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ ಅವರ ಭೇಟಿಗೆ ರಾಮಚಂದ್ರ ರಾವ್ ತೆರಳಿದ್ದರು. ಆದರೆ, ಭೇಟಿ ಸಾಧ್ಯವಾಗಿಲ್ಲ.
‘ಅದು ತಿರುಚಿದ ವಿಡಿಯೊವಾಗಿದೆ. ವಿಡಿಯೊ ಸುಳ್ಳು. ತನಿಖೆ ಆಗಬೇಕು’ ಎಂದು ರಾಮಚಂದ್ರ ರಾವ್ ಅವರು ಗೃಹ ಸಚಿವರ ನಿವಾಸದ ಎದುರು ಮಾಧ್ಯಮದವರಿಗೆ ಪ್ರಕ್ರಿಯೆ ನೀಡಿದರು.
‘ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ. ಎಂಟು ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿ ಇದ್ದೆ. ಇದರ ಬಗ್ಗೆ ನಾನು ವಕೀಲರ ಜೊತೆಗೆ ಮಾತನಾಡುತ್ತೇನೆ. ಇದರ ಬಗ್ಗೆ ತನಿಖೆ ಆಗಬೇಕು’ ಎಂದು ರಾಮಚಂದ್ರ ರಾವ್ ಹೇಳಿದ್ದಾರೆ.
ಕಚೇರಿಯ ಕುರ್ಚಿಯಲ್ಲಿ ಕುಳಿತು ಮಹಿಳೆಯನ್ನು ಅಪ್ಪಿಕೊಳ್ಳುತ್ತಿರುವ ಹಾಗೂ ಮುತ್ತಿಡುತ್ತಿರುವ ದೃಶ್ಯವು ವಿಡಿಯೊದಲ್ಲಿ ಸೆರೆಯಾಗಿದೆ.
ನಟಿ ರನ್ಯಾರಾವ್ ಅವರ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆಯ ಮೇಲೆ ಸರ್ಕಾರ ಕಳುಹಿಸಿತ್ತು. ಈ ಆದೇಶವನ್ನು ಸರ್ಕಾರ ಇತ್ತೀಚೆಗಷ್ಟೇ ವಾಪಸ್ ಪಡೆದುಕೊಂಡಿತ್ತು. ಬಳಿಕ, ಡಿಸಿಆರ್‌ಐ ಡಿಜಿಪಿಯಾಗಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ರನ್ಯಾರಾವ್ ಅವರ ಮಲತಂದೆ ರಾಮಚಂದ್ರ ರಾವ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.