ADVERTISEMENT

ಮೈಸೂರಿನ ಅತ್ಯಾಚಾರ ಪ್ರಕರಣದ ತನಿಖೆಗೆ ಡಿಜಿಪಿ ಮೇಲುಸ್ತುವಾರಿ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2021, 16:19 IST
Last Updated 27 ಆಗಸ್ಟ್ 2021, 16:19 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ (ಡಿಜಿಪಿ) ಮೇಲುಸ್ತುವಾರಿಯಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಡಿಜಿಪಿ ಪ್ರವೀಣ್‌ ಸೂದ್‌ ಅವರು ಮೈಸೂರಿಗೆ ತೆರಳಿದ್ದಾರೆ. ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಯ ಮೇಲುಸ್ತುವಾರಿ ವಹಿಸಿಕೊಳ್ಳುವಂತೆ ಅವರಿಗೆ ಸೂಚಿಸಿದ್ದೇನೆ. ತನಿಖೆಯ ಪ್ರಗತಿ ಕುರಿತು ನೇರವಾಗಿ ನನಗೆ ವರದಿ ನೀಡುವಂತೆಯೂ ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದರು.

ನಿತ್ಯ ಐದು ಲಕ್ಷ ಡೋಸ್‌ಗೆ ಬೇಡಿಕೆ

ADVERTISEMENT

ಸೆಪ್ಟೆಂಬರ್‌ 1ರಿಂದ ಪ್ರತಿದಿನ ಐದು ಲಕ್ಷ ಡೋಸ್‌ ಕೋವಿಡ್‌ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ. ಅದಕ್ಕೆ ಪೂರಕವಾಗಿ ನಿತ್ಯ ಐದು ಲಕ್ಷ ಡೋಸ್‌ ಲಸಿಕೆಯನ್ನು ರಾಜ್ಯಕ್ಕೆ ಹಂಚಿಕೆ ಮಾಡುವಂತೆ ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದೆ. ರಾಜ್ಯದಲ್ಲಿ ಲಸಿಕೆಯ ಬಳಕೆ ಪ್ರಮಾಣ ಆಧರಿಸಿ ಅಗತ್ಯವಿರುವಷ್ಟು ಡೋಸ್‌ ಹಂಚಿಕೆ ಮಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ದೆಹಲಿ ಪ್ರವಾಸದ ವೇಳೆ ಹಲವು ಸಭೆಗಳನ್ನು ನಡೆಸಲಾಗಿದೆ. ರಾಜ್ಯದ ಬೃಹತ್‌ ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಪೂರಕವಾಗಿ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ಅಂತರರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರ ತಂಡದೊಂದಿಗೆ ಸಭೆ ನಡೆಸಲಾಗಿದೆ ಎಂದರು.

ರಾಜಕೀಯ ಚರ್ಚಿಸಿಲ್ಲ

‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಕುಟುಂಬದ ಸದಸ್ಯರೊಬ್ಬರಿಗೆ ಅನಾರೋಗ್ಯ ಸಮಸ್ಯೆ ಉಂಟಾಗಿರುವ ಕಾರಣದಿಂದ ಅವರನ್ನು ಭೇಟಿಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಸಂಪುಟ ವಿಸ್ತರಣೆಯೂ ಸೇರಿದಂತೆ ಯಾವುದೇ ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.