ಬೆಂಗಳೂರು: ಧರ್ಮಸ್ಥಳದಲ್ಲಿ ಪತ್ರಕರ್ತರ ಮೇಲಿನ ಹಲ್ಲೆ ಅಕ್ಷಮ್ಯ ಅಪರಾಧ. ಕಾನೂನು ಮೀರಿ ಯಾರೂ ನಡೆದುಕೊಳ್ಳಬಾರದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಹಲ್ಲೆ ಪ್ರಕರಣ ಹಾಗೂ ಧರ್ಮ ಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಗೃಹ ಸಚಿವರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ದಕ್ಷಿಣ ಕನ್ನಡದಲ್ಲಿ ಹಿಂದೆಯೂ ಕುಕ್ಕರ್ ಸ್ಪೋಟ ಪ್ರಕರಣ ನಡೆದಾಗ, ಅದು ಸಣ್ಣ ಘಟನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದರು. ದಕ್ಷಿಣ ಕನ್ನಡದಲ್ಲಿ ಇಂಥ ಘಟನೆಗಳು ನಡೆಯುತ್ತಲೇ ಇವೆ. ರಾಜ್ಯದಲ್ಲಿ ಆತಂಕ ಸೃಷ್ಟಿಯಾಗಿದೆ. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಶಾಸಕ ವಿ.ಸುನಿಲ್‌ಕುಮಾರ್ ಮಾತನಾಡಿ, ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವು ಆರೋಪದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆಯೋ, ಯೂಟ್ಯೂಬರ್‌ಗಳು ನಡೆಸುತ್ತಿದ್ದಾರೋ ಎಂಬ ಅನುಮಾನ ಕಾಡುತ್ತಿದೆ. ತನಿಖೆ ಹೆಸರಲ್ಲಿ ಧಾರ್ಮಿಕ ನಂಬಿಕೆಗಳನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ದೂರದಾರರ ಅಣತಿಯಂತೆ ತನಿಖೆ ನಡೆಸಲಾಗುತ್ತಿದೆ. ತನಿಖೆಯ ಮಧ್ಯಂತರ ವರದಿಯನ್ನು ಎಸ್‌ಐಟಿ ತಕ್ಷಣ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.