ADVERTISEMENT

ಧರ್ಮಸ್ಥಳ ಪ್ರಕರಣ: ಮೇಲ್ಮನವಿ ಶುಕ್ರವಾರ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 15:31 IST
Last Updated 7 ಆಗಸ್ಟ್ 2025, 15:31 IST
<div class="paragraphs"><p>ಧರ್ಮಸ್ಥಳ ಪ್ರಕರಣ</p></div>

ಧರ್ಮಸ್ಥಳ ಪ್ರಕರಣ

   

ನವದೆಹಲಿ: ‘ಕೊಲೆಯಾದ ನೂರಾರು ಶವಗಳನ್ನು ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹೂಳಲಾಗಿದೆ‌’ ಎಂಬ ಆರೋಪ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಮಾಡದಂತೆ ಮಾಧ್ಯಮಗಳಿಗೆ ಹೇರಿದ್ದ ನಿರ್ಬಂಧ ತೆರವುಗೊಳಿಸಿದ್ದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಿಚಾರಣೆ ನಡೆಸಲಿದೆ. 

‘ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ತಮ್ಮ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು’ ಎಂದು ಮಾಧ್ಯಮಗಳನ್ನು ನಿರ್ಬಂಧಿಸಿ, ಸಿಟಿ ಸಿವಿಲ್‌ ಕೋರ್ಟ್‌ ಹೆಚ್ಚುವರಿ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಹೈಕೋರ್ಟ್‌ ರದ್ದುಗೊಳಿಸಿತ್ತು. ಧರ್ಮಸ್ಥಳ ದೇವಾಲಯ ಸಂಸ್ಥೆಯ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

‘ಸುಮಾರು 8,000 ಯೂಟ್ಯೂಬ್ ಚಾನೆಲ್‌ಗಳು ಧರ್ಮಸ್ಥಳ ದೇವಾಲಯದ ವಿರುದ್ಧ ಮಾನಹಾನಿಕರ ವಿಷಯಗಳನ್ನು ಪ್ರಕಟಿಸುತ್ತಿವೆ’ ಎಂದು ವಕೀಲರು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠದ ಗಮನಕ್ಕೆ ತಂದರು. ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿಯನ್ನು ತುರ್ತು ಪಟ್ಟಿಗೆ ಸೇರಿಸುವಂತೆ ಕೋರಿದರು.

ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಕೆ.ವಿನೋದ್ ಚಂದ್ರನ್ ಅವರನ್ನು ಒಳಗೊಂಡ ಪೀಠವು ಈ ವಿಷಯವನ್ನು ಶುಕ್ರವಾರ ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಎಂದು ಹೇಳಿತು.

‘ಸ್ವಚ್ಛತಾ ಕಾರ್ಮಿಕನೊಬ್ಬ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನ ಅನ್ವಯ ದಾಖಲಾಗಿರುವ ಎಫ್‌ಐಆರ್‌ನಲ್ಲಿ, ನಮ್ಮ ವಿರುದ್ಧ ಯಾವುದೇ ಆರೋಪಗಳು ಇಲ್ಲದಿದ್ದರೂ ನಮ್ಮ ಕುಟುಂಬ, ದೇವಾಲಯ ಹಾಗೂ ಸಂಸ್ಥೆಗಳ ವಿರುದ್ಧ ಆನ್‌ಲೈನ್‌ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆಗಳನ್ನು ಬಿತ್ತರಿಸಲಾಗುತ್ತಿದ್ದು ಇದನ್ನು ನಿರ್ಬಂಧಿಸಲು ಆದೇಶಿಸಬೇಕು’ ಎಂದು ಹರ್ಷೇಂದ್ರ ಕುಮಾರ್‌ ಅಸಲು ದಾವೆಯಲ್ಲಿ ಕೋರಿದ್ದರು.

ಮಧ್ಯಂತರ ಮನವಿ ಪುರಸ್ಕರಿಸಿದ್ದ ಸಿಟಿ ಸಿವಿಲ್‌ ಕೋರ್ಟ್‌ನ 10ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ವಿಜಯ ಕುಮಾರ್ ರೈ, ‘ಮುಂದಿನ ವಿಚಾರಣೆಯವರೆಗೆ ಡಿಜಿಟಲ್, ಸಾಮಾಜಿಕ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕರ ವಸ್ತು–ವಿಷಯ ಪ್ರಕಟಿಸಬಾರದು ಇಲ್ಲವೇ ಹಂಚಬಾರದು’ ಎಂದು ಪ್ರತಿವಾದಿಗಳು ಮತ್ತು ಅಪರಿಚಿತ ವ್ಯಕ್ತಿಗಳ ವಿರುದ್ಧ ಜುಲೈ 8ರಂದು ಪ್ರತಿಬಂಧಕ ಆದೇಶ ಹೊರಡಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.