ADVERTISEMENT

ಧರ್ಮಸ್ಥಳ | ಮಹಿಳೆಯರ ನಾಪತ್ತೆ ತನಿಖೆಗೆ ಎಸ್‌ಐಟಿ ರಚಿಸಿ: ಡಾ. ನಾಗಲಕ್ಷ್ಮಿ ಚೌಧರಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2025, 22:59 IST
Last Updated 14 ಜುಲೈ 2025, 22:59 IST
<div class="paragraphs"><p>ಡಾ. ನಾಗಲಕ್ಷ್ಮಿ ಚೌಧರಿ</p></div>

ಡಾ. ನಾಗಲಕ್ಷ್ಮಿ ಚೌಧರಿ

   

ಬೆಂಗಳೂರು: ‘ಧರ್ಮಸ್ಥಳ ವ್ಯಾಪ್ತಿಯಲ್ಲಿ 20 ವರ್ಷಗಳಿಂದ ನಾಪತ್ತೆ ಆಗಿರುವ ಮಹಿಳೆಯರು, ವಿದ್ಯಾರ್ಥಿನಿಯರು, ಅಸ್ವಾಭಾವಿಕ ಸಾವು, ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ‘ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತಿರುವು ದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಈ ಭಾಗದಲ್ಲಿ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. 20 ವರ್ಷಗಳಲ್ಲಿ ಹಲವು ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರದಂತಹ ಪ್ರಕರಣಗಳು ನಡೆದಿವೆ. ನಾಪತ್ತೆ, ಕೊಲೆಯಾದವರ ಕುಟುಂಬಸ್ಥರು ಪ್ರಕರಣಗಳನ್ನು ದಾಖಲಿಸಲು ಪೊಲೀಸ್‌ ಠಾಣೆಗೆ ಹೋದಾಗ ಪೊಲೀಸರು ಸರಿಯಾಗಿ ಸ್ಪಂದಿಸಿಲ್ಲ ಎಂಬ ಆರೋಪವಿದೆ’ ಎಂದು ಉಲ್ಲೇಖಿಸಿದ್ದಾರೆ.

ADVERTISEMENT

ಏಳು ದಿನಗಳಲ್ಲಿ ಮಾಹಿತಿ ನೀಡಿ:

‘ಧರ್ಮಸ್ಥಳದ ವ್ಯಾಪ್ತಿಯಲ್ಲಿ 20 ವರ್ಷಗಳಿಂದ ಎಷ್ಟು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ನಾಪತ್ತೆ ಯಾಗಿದ್ದಾರೆ. ಇದರಲ್ಲಿ ಎಷ್ಟು ಮಂದಿಯನ್ನು ಪತ್ತೆ ಮಾಡಲಾಗಿದೆ? ಅಸ್ವಾಭಾವಿಕ ಸಾವು, ಕೊಲೆ ಪ್ರಕರಣ ಗಳಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ. ಎಷ್ಟು ಅತ್ಯಾಚಾರ ಪ್ರಕರಣಗಳು ನಡೆದಿವೆ ಎಂಬ ವಿವರವನ್ನು ಏಳು ದಿನಗಳಲ್ಲಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿಗೆ ಸೂಚಿಸಲಾಗಿದೆ’ ಎಂದು ನಾಗಲಕ್ಷ್ಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.