ADVERTISEMENT

ಸೌಜನ್ಯ ಕೊಲೆ ಪ್ರಕರಣ: ಸೂಕ್ತ ತನಿಖೆಗೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2023, 20:00 IST
Last Updated 28 ಆಗಸ್ಟ್ 2023, 20:00 IST
   

ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ತನಿಖೆಯನ್ನಾದರೂ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ನ್ಯಾಯಾಂಗ ಮತ್ತು ಧರ್ಮಸ್ಥಳದ ಮಂಜುನಾಥ ದೇವಾಲಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡುತ್ತಿರುವ ಉಜಿರೆಯ ಮಹೇಶ್ ತಿಮ್ಮರೋಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು‘ ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿಂತೆ, ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ‘ಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ನಂದೀಶ್‌ ಕುಮಾರ್ ಜೈನ್‌ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದು ಇದಿನ್ನೂ ವಿಚಾರಣೆಗೆ ನಿಗದಿಯಾಗಬೇಕಿದೆ.

ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಮಹೇಶ್‌ ತಿಮ್ಮರೋಡಿ ಸೇರಿದಂತೆ ಒಟ್ಟು ಒಂಬತ್ತು ಜನರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ADVERTISEMENT

ಅರ್ಜಿಯಲ್ಲಿ ಏನಿದೆ?: '2012ರಲ್ಲಿ ನಡೆದ ಕುಮಾರಿ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್‌ ಶೆಟ್ಟಿ ಅಲಿಯಾಸ್‌ ರವಿ ಅಲಿಯಾಸ್‌ ಮಹೇಶ್‌ ತಿಮ್ಮರೋಡಿ ಮತ್ತು ಆತನ ಅನುಯಾಯಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯ ಮತ್ತು ದೇವಸ್ಥಾನಕ್ಕೆ ಸೇರಿದ ಸಂಸ್ಥೆಗಳು, ಟ್ರಸ್ಟ್‌ ವಿರುದ್ಧ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ನ್ಯಾಯಾಂಗ ಮತ್ತು ನ್ಯಾಯಾಧೀಶರ ವಿರುದ್ಧ ನಿಂದನಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪೊಲೀಸ್‌ ಇಲಾಖೆಯ ಬಗ್ಗೆಯೂ ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಯೂ– ಟ್ಯೂಬ್ ಚಾನೆಲ್‌ಗಳು, ಮುದ್ರಣ ಮಾಧ್ಯಮ ಮತ್ತು ಟಿ.ವಿ.ಚಾನೆಲ್‌ಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದಾರೆ‘ ಎಂದು ಆಪಾದಿಸಲಾಗಿದೆ.

‘ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಂಬಂಧಿಸಿದ ಪೊಲೀಸ್‌ ಇಲಾಖೆಗೆ 2023ರ ಆಗಸ್ಟ್‌ 5ರಂದು ಮನವಿ ನೀಡಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಅಧೀನ ನ್ಯಾಯಾಲಯ ಮಾಡಿರುವ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ನಿರ್ದೇಶಿಸಬೇಕು ಮತ್ತು ಈ ಮನವಿಯ ಅನುಸಾರ ಪ್ರಕರಣವನ್ನು ಸೂಕ್ತ ತನಿಖಾ ಸಂಸ್ಥೆಗೆ ವಹಿಸಿ ನ್ಯಾಯ ಒದಗಿಸಲು ಕೋರಲಾಗಿದೆ. ಆದ್ದರಿಂದ, ಈ ಮನವಿಯ ಅನುಸಾರ ಪ್ರತಿವಾದಿ ಸರ್ಕಾರದ ಸಂಸ್ಥೆಗಳು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು‘ ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.