ADVERTISEMENT

ಅಮೃತ ಮಹೋತ್ಸವಕ್ಕೆ 14 ‘ಅಮೃತ’ ಯೋಜನೆ

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಿ.ಎಂ ಬಸವರಾಜ ಬೊಮ್ಮಾಯಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 22:16 IST
Last Updated 15 ಆಗಸ್ಟ್ 2021, 22:16 IST
ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು
ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು   

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ 14 ಹೊಸ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಲವು ಕಾರ್ಯಕ್ರಮಗಳಿಗೆ ಒಟ್ಟು ₹ 644.5 ಕೋಟಿ ಅನುದಾನವನ್ನೂ ಪ್ರಕಟಿಸಿದರು.

ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಭಾನುವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ದೇಶಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷಗಳಾಗುತ್ತಿವೆ. ಸ್ವತಂತ್ರರಾಗಿ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂಭ್ರಮ ಒಂದು ದಿನಕ್ಕಿದ್ದರೆ ಸಾಲದು. ಎರಡು ವರ್ಷಗಳ ಕಾಲ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲಾಗುವುದು. ಅದೇ ನೆನಪಿನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಹೊಸ ಕಾರ್ಯಕ್ರಮಗಳನ್ನು ಅನು ಷ್ಠಾನಕ್ಕೆ ತರಲಾಗುವುದು’ ಎಂದರು.

ರಾಜ್ಯದ ಆಯ್ದ 750 ಗ್ರಾಮ ಪಂಚಾಯಿತಿಗಳನ್ನು ‘ಅಮೃತ ಗ್ರಾಮ ಪಂಚಾಯಿತಿ’ ಎಂದು ಗುರುತಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಪ್ರತಿಮನೆಗೆ ಕುಡಿಯುವ ನೀರು, ಘನತ್ಯಾಜ್ಯದ ಶೇ 100 ರಷ್ಟು ವಿಂಗಡಣೆ ಮತ್ತುವಿಲೇವಾರಿ, ತ್ಯಾಜ್ಯ ನೀರಿನ ವೈಜ್ಞಾನಿಕ ವಿಸರ್ಜನೆ, ಸೌರ ವಿದ್ಯುತ್‌ ಘಟಕಗಳ ಅಳವಡಿಕೆ, ಡಿಜಿಟಲ್‌ ಗ್ರಂಥಾಲಯಗಳುಳ್ಳ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು.

ADVERTISEMENT

ಆಯ್ದ 750 ಗ್ರಾಮ ಪಂಚಾಯಿತಿಗಳಲ್ಲಿ ‘ಅಮೃತ ಗ್ರಾಮೀಣ ವಸತಿ ಯೋಜನೆ’ ಅನುಷ್ಠಾನಗೊಳಿಸಲಾಗುವುದು. ಅಲ್ಲಿ ವಸತಿ ರಹಿತ ಮತ್ತು ಆಶ್ರಯ ರಹಿತರನ್ನು ಗುರುತಿಸಿ ಎಲ್ಲರಿಗೂವಸತಿ ಕಲ್ಪಿಸಲಾಗುವುದು ಎಂದರು.

750 ಶಾಲಾ, ಕಾಲೇಜುಗಳನ್ನು ಗುರುತಿಸಿ, ಅಲ್ಲಿನ ವಿದ್ಯಾರ್ಥಿಗಳನ್ನು ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಲು ‘ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ರೈತ ಉತ್ಪಾದಕ ಸಂಸ್ಥೆ: ರೈತರು, ನೇಕಾರರು ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟವನ್ನು ಉತ್ತೇಜಿಸಲು 750 ‘ಅಮೃತ ರೈತ ಉತ್ಪಾದಕ ಸಂಸ್ಥೆ’ಗಳನ್ನು ಸ್ಥಾಪಿಸಲಾಗುವುದು. ಈ ಸಂಸ್ಥೆಗಳಿಗೆ ತಲಾ ₹ 30 ಲಕ್ಷದಂತೆ ಮೂರು ವರ್ಷದ ಅವಧಿಯಲ್ಲಿ ಒಟ್ಟು ₹ 225 ಕೋಟಿ ಅನುದಾನ ನೀಡಲಾಗುವುದು ಎಂದು ಪ್ರಕಟಿಸಿದರು.

75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ‘ಅಮೃತ ನಿರ್ಮಲ ನಗರ’ ಯೋಜನೆ ಅನುಷ್ಠಾನಗೊಳಿಸಲಾಗುವುದು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ತಲಾ ₹ 1 ಕೋಟಿ ಅನುದಾನ ನೀಡಲಾಗುವುದು. 750 ಶಾಲೆಗಳಿಗೆ ತಲಾ ₹ 10 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಮತ್ತಿತರ ಸೌಲಭ್ಯ ಕಲ್ಪಿಸಲು ‘ಅಮೃತ ಶಾಲಾ ಸೌಲಭ್ಯ ಯೋಜನೆ’ ಜಾರಿಗೆ ಬರಲಿದೆ ಎಂದರು.

ತಲಾ ₹ 1 ಲಕ್ಷ ಅನುದಾನದಲ್ಲಿ 750 ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಲು ‘ಅಮೃತ ಅಂಗನವಾಡಿ ಕೇಂದ್ರ’ ಯೋಜನೆ ರೂಪಿಸಲಾಗಿದೆ. ‘ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆ’ ಅಡಿಯಲ್ಲಿ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ₹ 150 ಕೋಟಿ ವೆಚ್ಚ ಮಾಡಲಾಗುವುದು ಎಂದು ಬೊಮ್ಮಾಯಿ ಘೋಷಿಸಿದರು.

ಕಿರು ಉದ್ದಿಮೆಗಳ ಆರಂಭ:
7,500 ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳನ್ನಾಗಿ ರೂಪಿಸಲು ‘ಅಮೃತ ಸ್ವಸಹಾಯ ಕಿರು ಉದ್ಯಮ’ ಯೋಜನೆಯಡಿ ತಲಾ ₹ 1 ಲಕ್ಷ ಮೂಲಧನ ನೀಡಲಾಗುವುದು. ಇದಕ್ಕಾಗಿ ₹ 75 ಕೋಟಿ ಅನುದಾನ ಒದಗಿಸಲಾಗುವುದು ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳ 75,000 ಯುವಕ, ಯುವತಿಯರಿಗೆ ‘ಅಮೃತ ಕೌಶಲ್ಯ ಯೋಜನೆ’ಯಡಿ ಕೌಶಲ ಅಭಿವೃದ್ಧಿ ತರಬೇತಿ ನೀಡಲಾಗುವುದು. ಈ ಯೋಜನೆಗೆ ₹ 112 ಕೋಟಿ ವೆಚ್ಚವಾಗಲಿದೆ ಎಂದರು.

ಪ್ಯಾರೀಸ್‌ ಒಲಿಂಪಿಕ್‌ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವಂತಹ ಸಾಮರ್ಥ್ಯವುಳ್ಳ ಕ್ರೀಡಾಪಟುಗಳನ್ನು ರೂಪಿಸುವುದಕ್ಕಾಗಿ ‘ಅಮೃತ ಕ್ರೀಡಾ ದತ್ತು ಯೋಜನೆ’ ಅಡಿಯಲ್ಲಿ 75 ಕ್ರೀಡಾಪಟುಗಳಿಗೆ ತರಬೇತಿ, ಪ್ರೋತ್ಸಾಹ ನೀಡಲಾಗುವುದು. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ 75 ನವೋದ್ಯಮಗಳಿಗೆ ‘ಅಮೃತ’ ‍ಪ್ರೋತ್ಸಾಹಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಪ್ರಕಟಿಸಿದರು.

‘ಮೇಕೆದಾಟು ಅನುಷ್ಠಾನ ಖಚಿತ’:

‘ನೆರೆಯ ರಾಜ್ಯ ಅಡ್ಡಿಪಡಿಸಿದರೂ ಮೇಕೆದಾಟು ಸಮಾನಾಂತರ ಜಲಾಶಯ ನಿರ್ಮಾಣ ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

‘ಕಾವೇರಿ ಜಲ ವಿವಾದ ನ್ಯಾಯಾಧೀಕರಣ ಮತ್ತು ಸುಪ್ರೀಂಕೋರ್ಟ್‌ ತೀರ್ಪಿನ ಅನುಸಾರ ರಾಜ್ಯಕ್ಕೆ ಹಂಚಿಕೆಯಾಗಿರುವ ಹೆಚ್ಚುವರಿ ನೀರಿನ ಬಳಕೆಗೆ ಈ ಯೋಜನೆ ಸಹಕಾರಿಯಾಗಲಿದೆ. ಕುಡಿಯುವ ನೀರು ಪೂರೈಕೆ ಮತ್ತು ವಿದ್ಯುತ್‌ ಉತ್ಪಾದನೆಗೆ ಅಗತ್ಯವಾಗಿರುವ ಈ ಯೋಜನೆಯ ಅನುಷ್ಠಾನದಿಂದ ನಮ್ಮ ಸರ್ಕಾರ ಹಿಂದೆ ಸರಿಯುವುದಿಲ್ಲ. ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಗೆ ಶೀಘ್ರದಲ್ಲಿ ಕೇಂದ್ರದ ಅನುಮೋದನೆ ದೊರೆಯುವ ನಿರೀಕ್ಷೆ ಇದೆ’ ಎಂದು ಸ್ವಾತಂತ್ರ್ಯ ದಿನಾಚರಣೆ ಸಂದೇಶದಲ್ಲಿ ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು. ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ವೇಗ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.

‘ರಾಜ್ಯದ ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ಯಾರೊಂದಿಗೂ ನಾನು ರಾಜಿ ಮಾಡಿಕೊಳ್ಳುವುದಿಲ್ಲ. ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಕಟಿಬದ್ಧನಾಗಿ ಕೆಲಸ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.