ADVERTISEMENT

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲು ನಮ್ಮ ಗುರಿ: ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2018, 7:47 IST
Last Updated 15 ಅಕ್ಟೋಬರ್ 2018, 7:47 IST
   

ಬೆಂಗಳೂರು: ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಜಂಟಿಯಾಗಿ ಎದುರಿಸಲಿದ್ದು, 5 ಕ್ಷೇತ್ರಗಳಲ್ಲಿ ನಾವು ಗೆಲುವಿನ ನಗೆ ಬೀರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭರವಸೆ ವ್ಯಕ್ತಪಡಿಸಿದರು.

ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗುಂಡೂರಾವ್, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ನಮ್ಮ ಗುರಿ ಎಂದರು.

ಶಿವಮೊಗ್ಗದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತಗಳು ಬಂದಿದ್ದರೂ ಬಿಜೆಪಿಯನ್ನು ಸೋಲಿಸಲು ನಮ್ಮದೇ ಕಾರ್ಯತಂತ್ರ ರೂಪಿಸಿ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟು ಕೊಡಲು ತೀರ್ಮಾನಿಸಿದ್ದೇವೆ. ಬಿಜೆಪಿಯು ಅನಾವಶ್ಯಕವಾಗಿ ಉಪಚುನಾವಣೆ ತಂದೊಡ್ಡಿದೆ ಎಂದು ಹೇಳಿದರು.

ADVERTISEMENT

ಮುಂದಿನ ಚುನಾವಣೆಯಲ್ಲಿ ಆಡಳಿತರೂಢ ಪಕ್ಷ ಬಿಜೆಪಿಯನ್ನು ಕಿತ್ತೊಗೆಯಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ನಮ್ಮ ಉದ್ದೇಶ ಬಿಜೆಪಿಯನ್ನು ಸೋಲಿಸುವುದು. ಹಾಗಾಗಿ ಶಿವಮೊಗ್ಗದಲ್ಲಿ ಮೈತ್ರಿಯ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ಮಹತ್ವದ ಪಾತ್ರ ವಹಿಸುತ್ತದೆ. ಪ್ರತಿ ಕ್ಷೇತ್ರಕ್ಕೆ ಬೇರೆಯದೇ ಕಾರ್ಯತಂತ್ರವಿರುತ್ತದೆ ಎಂದು ತಿಳಿಸಿದರು.

ಅಲ್ಲದೇ ಜಮಖಂಡಿಗೆ ಉಪಮುಖ್ಯಮಂತ್ರಿ ಪರಮೇಶ್ವರ್, ಬಳ್ಳಾರಿಗೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, ರಾಮನಗರಕ್ಕೆ ಡಿಕೆ ಸುರೇಶ್, ಶಿವಮೊಗ್ಗಕ್ಕೆ ದೇಶಪಾಂಡೆ ಅವರನ್ನು ಉಸ್ತುವಾರಿಗಳಾಗಿ ನೇಮಿಸಿದ್ದೇವೆ. ಜಮಖಂಡಿ ಹಾಗೂ ಬಳ್ಳಾರಿ ಬಗ್ಗೆ ಎಐಸಿಸಿ ತೀರ್ಮಾನವೇ ಅಂತಿಮ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.