
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
– ಪ್ರಜಾವಾಣಿ ಚಿತ್ರ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಣವು ಚಟುವಟಿಕೆ ಆರಂಭಿಸಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಔತಣಕೂಟದ ನೆಪದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಬೆಳಗಾವಿಯ ಹೊರವಲಯದಲ್ಲಿ ಇರುವ ಫಾರ್ಮ್‌ಹೌಸ್‌ನಲ್ಲಿ ಡಿ.ಕೆ.ಶಿವಕುಮಾರ್ ಅವರು ತಡರಾತ್ರಿ ಏರ್ಪಡಿಸಿದ್ದ ಔತಣಕೂಟದಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ, ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಅಧ್ಯಕ್ಷ ಅಪ್ಪಾಜಿ ನಾಡಗೌಡ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹ್ಯಾರಿಸ್ ಸೇರಿದಂತೆ ಸುಮಾರು 25 ಶಾಸಕರು ಪಾಲ್ಗೊಂಡಿದ್ದರು ಎಂದು ಗೊತ್ತಾಗಿದೆ. ಬಿಜೆಪಿಯಿಂದ ಉಚ್ಚಾಟಿತರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಈ ಔತಣಕೂಟದಲ್ಲಿ ಪಾಲ್ಗೊಂಡಿರುವುದಾಗಿ ತಿಳಿದುಬಂದಿದೆ.
ಬೆಳಗಾವಿಯ ಮಾಜಿ ಶಾಸಕ ಫಿರೋಜ್ ಸೇಠ್ ಬುಧವಾರ ರಾತ್ರಿ ತಮ್ಮ ಮನೆಯಲ್ಲಿ ಆಯೋಜಿಸಿದ್ದ ಭೋಜನಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಬಲಿಗರು ಪಾಲ್ಗೊಂಡಿದ್ದರು. ಸತೀಶ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ, ಜಮೀರ್ ಅಹಮದ್ ಖಾನ್, ಎನ್.ಎ.ಹ್ಯಾರಿಸ್, ಆಸಿಫ್ ಸೇಠ್ ಸೇರಿ ಹಲವರು ಭಾಗಿಯಾಗಿದ್ದರು. ಈ ಭೋಜನ ಕೂಟ ಮುಗಿದ ಬಳಿಕ ಬೆಳಗಾವಿಯ ಹೋಟೆಲ್ ಒಂದರಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ಸೇರಿದ್ದ ವಾಲ್ಮೀಕಿ ಸಮುದಾಯದ ಶಾಸಕರು ಸುದೀರ್ಘ ಅವಧಿ ಚರ್ಚೆ ನಡೆಸಿದ್ದರು.
ಮುಖ್ಯಮಂತ್ರಿ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಗುರುವಾರ ಬೆಳಿಗ್ಗೆ ಸುದ್ದಿಗಾರರ ಜತೆ ಮಾತನಾಡಿ, ‘ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ’ ಎಂದು ಪ್ರತಿಪಾದಿಸಿದ್ದರು.
ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ತಮ್ಮ ಬಲ ಪ್ರದರ್ಶನಕ್ಕೆ ಮುಂದಾದ ಡಿ.ಕೆ.ಶಿವಕುಮಾರ್ ಭೋಜನಕೂಟದ ನೆಪದಲ್ಲಿ, ತಮ್ಮ ಜತೆಗಿರುವ ಶಾಸಕರನ್ನು ಒಗ್ಗೂಡಿಸುವ ಯತ್ನ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.