ADVERTISEMENT

ಅಂತರ ರಾಜ್ಯ ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 16:41 IST
Last Updated 12 ಜುಲೈ 2021, 16:41 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕು ಹರಡುವುದನ್ನು ತಡೆಯುವುದಕ್ಕಾಗಿ ಅಂತರ ರಾಜ್ಯ ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜ್ಯದ ಗಡಿ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್‌ ನಿಯಂತ್ರಣ ಕುರಿತು ಗಡಿ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳ ಜತೆ ಸೋಮವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ ಅವರು, ‘ಗಡಿ ಭಾಗದಲ್ಲಿನ ತನಿಖಾ ಠಾಣೆಗಳಲ್ಲಿ ಬಿಗಿಯಾದ ಕ್ರಮಗಳನ್ನು ಅನುಸರಿಸಬೇಕು. ಮಹಾರಾಷ್ಟ್ರ ಮತ್ತು ಕೇರಳದಿಂದ ರಾಜ್ಯಕ್ಕೆ ಬರುವವರು ಆರ್‌ಟಿ–ಪಿಸಿಆರ್‌ ವಿಧಾನದಲ್ಲಿ ಪಡೆದಿರುವ ಕೋವಿಡ್‌ ನೆಗೆಟಿವ್‌ ವರದಿ ಹೊಂದಿರುವುದನ್ನು ಖಾತರಿಪಡಿಸಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ಸೋಂಕು ಇರುವವರು ಕಣ್ತಪ್ಪಿಸಿ ರಾಜ್ಯ ಪ್ರವೇಶಿಸದಂತೆ ಎಚ್ಚರಿಕೆ ವಹಿಸಬೇಕು. ಸೋಂಕು ಲಕ್ಷಣಗಳು ಇರುವವರ ಗಂಟಲು ಮತ್ತು ಮೂಗಿನ ದ್ರವದ ಮಾದರಿ ಪಡೆದು ಪರೀಕ್ಷಿಸಲು ಗಡಿಯಲ್ಲೇ ವ್ಯವಸ್ಥೆ ಮಾಡಿಕೊಳ್ಳಬೇಕು. ಆರೋಗ್ಯ ಇಲಾಖೆ ಸಹಯೋಗದಲ್ಲಿ ಈ ಕೆಲಸ ಮಾಡಬೇಕು ಎಂದು ತಿಳಿಸಿದರು.

ADVERTISEMENT

ಕಳೆದ ಬಾರಿ ಮಹಾರಾಷ್ಟ್ರ ಮತ್ತು ಕೇರಳದಿಂದ ಜನರು ಯಾವುದೇ ತಪಾಸಣೆ ಇಲ್ಲದೆ ಬರಲು ಅವಕಾಶ ನೀಡಿದ್ದರಿಂದ ರಾಜ್ಯದಲ್ಲಿ ಕೋವಿಡ್‌ ಸೋಂಕು ಹೆಚ್ಚಾಗಿತ್ತು. ಈ ಬಾರಿ ಅಂತಹ ಸಂದರ್ಭ ಮರುಕಳಿಸಲು ಅವಕಾಶ ನೀಡಬಾರದು ಎಂದು ಗೃಹ ಸಚಿವರು ತಾಕೀತು ಮಾಡಿದರು.

ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರತಾಪ್ ರೆಡ್ಡಿ ವಿಡಿಯೊ ಕಾನ್ಫರೆನ್ಸ್‌ನಲ್ಲಿದ್ದರು. ಬೆಳಗಾವಿ, ಬೀದರ್‌, ವಿಜಯಪುರ, ಕೊಡಗು, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.