ADVERTISEMENT

ಪಂಚಾಯಿತಿ ಮಟ್ಟದಲ್ಲೂ ವಿಪತ್ತು ನಿರ್ವಹಣಾ ಸಮಿತಿ: ಕಂದಾಯ ಸಚಿವ ಆರ್‌.ಅಶೋಕ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 15:42 IST
Last Updated 8 ಆಗಸ್ಟ್ 2020, 15:42 IST
ಆರ್‌. ಅಶೋಕ
ಆರ್‌. ಅಶೋಕ   

ಮಂಗಳೂರು: ಪ್ರವಾಹ, ಭೂಕುಸಿತ ಮತ್ತಿತರ ವಿಪತ್ತುಗಳು ಎದುರಾದ ಸಂದರ್ಭದಲ್ಲಿ ತುರ್ತು ಪರಿಹಾರ ಕಾರ್ಯಾಚರಣೆ ಕೈಗೊಳ್ಳಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲೆಯಲ್ಲಿನ ಮಳೆ ಹಾನಿ ಕುರಿತ ಪರಿಶೀಲನಾ ಸಭೆ ವೇಳೆ ಮಾತನಾಡಿದ ಅವರು, ‘ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಆಸಕ್ತ ಸ್ವಯಂಸೇವಕರನ್ನು ಒಳಗೊಂಡ ವಿಪತ್ತು ನಿರ್ವಹಣಾ ಸಮಿತಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚಿಸಬೇಕು. ವಿಪತ್ತುಗಳು ಎದುರಾದ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವ ಕುರಿತು ಸಮಿತಿಯ ಸದಸ್ಯರಿಗೆ ಸರ್ಕಾರದಿಂದ ತರಬೇತಿ ನೀಡಲಾಗುವುದು. ಸಭೆ ನಡೆಸುವುದಕ್ಕೂ ಅನುದಾನ ನೀಡಲಾಗುವುದು’ ಎಂದರು.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ಬರಲಿದೆ. ರಾಜ್ಯದ ಈ ಯೋಜನೆಯ ಕುರಿತು ಕೇಂದ್ರ ಸರ್ಕಾರವೂ ಮಾಹಿತಿ ಕೇಳಿದೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ತ್ವರಿತವಾಗಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚನೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.