ADVERTISEMENT

ದಕ್ಷಿಣ ಕನ್ನಡ | ಮಂಗಳೂರಿಗೆ ಬಂದ ಡಿ.ಕೆ.ಶಿವಕುಮಾರ್; ಹಿರಿಯ ಕಾಂಗ್ರೆಸ್ಸಿಗರ ಭೇಟಿ

​ಪ್ರಜಾವಾಣಿ ವಾರ್ತೆ
Published 31 ಜುಲೈ 2020, 6:29 IST
Last Updated 31 ಜುಲೈ 2020, 6:29 IST
   

ಮಂಗಳೂರು:ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಶುಕ್ರವಾರ ಜಿಲ್ಲೆಗೆ ಬಂದಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಮಾಜಿ ಸಚಿವರಾದ ಯು.ಟಿ ಖಾದರ್, ಮಾಜಿ ಶಾಸಕ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಹರೀಶಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ‌ ಅಧ್ಯಕ್ಷ ಮಿಥುನ್ ರೈ ಸ್ವಾಗತಿಸಿದರು.

ಆ ಬಳಿಕ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಅನಾರೋಗ್ಯದಿಂದ ಆಸ್ಕರ್ ಫರ್ನಾಂಡಿಸ್ ಅವರು ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡಿರಲಿಲ್ಲ. ಇದೇ ಸಂದರ್ಭದಲ್ಲಿ ಪಕ್ಷದ‌ ಸಂಘಟನೆಗಾಗಿ ಆಸ್ಕರ್ ಅವರ ಸಲಹೆಯನ್ನೂ ಶಿವಕುಮಾರ್ ಪಡೆದರು.

ADVERTISEMENT

ಬಿಷಪ್ ಹೌಸ್ ನಲ್ಲಿ ಬಿಷಪ್ ರೆ‌.ಡಾ.ಪೀಟರ್ ಪಾವ್ಲ್ ಸಲ್ಡಾನ ಅವರನ್ನು ಭೇಟಿ ಮಾಡಿದರು.

ಕಂಕನಾಡಿಗೆ ತೆರಳಿ ರಿಕ್ಷಾ ಚಾಲಕರ ಸಂಘದ ಪದಾಧಿಕಾರಿಗಳನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು. ನಂತರ ರಿಕ್ಷಾ ಚಾಲಕರಿಗೆ ಮಾಸ್ಕ್, ಸ್ಯಾನಿಟೈಸರ್ ಕಿಟ್ ವಿತರಿಸಿದರು.

ಕೋವಿಡ್ ವಾರಿಯರ್ಸ್‌ ಆಗಿ ಸೇವೆ ಸಲ್ಲಿಸುತ್ತಿರುವ ಪಕ್ಷದ 60 ಮಂದಿ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಲಿದ್ದು, ಮಧ್ಯಾಹ್ನ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ಧರ್ಮಸ್ಥಳಕ್ಕೆ ತೆರಳಲಿದ್ದು, ಶುಕ್ರವಾರ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.