
ಡಿ.ಕೆ.ಶಿವಕುಮಾರ್
ಬೆಂಗಳೂರು: 'ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಕೆಪಿಸಿಸಿ ಅಧ್ಯಕ್ಷ ಆದಾಗಲೂ ಪಕ್ಷದ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿ ತಾವು ಮಾಡಿದ ಕಾರ್ಯ, ತಮ್ಮ ಪಕ್ಷ ನಿಷ್ಠೆಯನ್ನು ಬಲವಾಗಿ ಪ್ರತಿಪಾದಿಸಿದರು.
‘ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕೋ ಎಲ್ಲವನ್ನೂ ಮಾಡಿದ್ದೇನೆ. ಮುಂದೆಯೂ ಪಕ್ಷದ ಕಾರ್ಯಕರ್ತನಾಗಿ ಇರಲು ಬಯಸುತ್ತೇನೆ. ಮುಂದೆಯೂ ಅದೇ ಕೆಲಸವನ್ನು ಬದ್ಧತೆಯಿಂದ ಮಾಡುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ನಾಯಕತ್ವ ವಿಚಾರ, ರಾಜಕೀಯ ಚರ್ಚೆ ಮಾಡಿಲ್ಲ. ನಾನು ಚರ್ಚೆ ಮಾಡುವುದೂ ಇಲ್ಲ. ಮಾಡುವ ಅವಶ್ಯಕತೆಯೂ ಇಲ್ಲ’ ಎಂದರು.
ಆಹ್ವಾನ ಬಂದರೆ ಭಾಗಿ
‘ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ (ಸಿಡಬ್ಲ್ಯೂಸಿ)ಕರೆದರೆ ಖಂಡಿತಾ ಹೋಗುತ್ತೇನೆ.
ಆದರೆ, ಇದುವರೆಗೂ ಕರೆದಿಲ್ಲ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಸಿ.ಎಂ ಇಂದು ದೆಹಲಿಗೆ
ದೆಹಲಿಯಲ್ಲಿ ಡಿ.27ರಂದು ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಿದ್ದಾರೆ.
ಸಭೆಯಲ್ಲಿ ಭಾಗವಹಿಸಲು ಅವರು ಶುಕ್ರವಾರ ರಾತ್ರಿ ವಿಶೇಷ ವಿಮಾನದಲ್ಲಿ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.