ADVERTISEMENT

ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಿ: ಡಿ.ಕೆ.ಶಿವಕುಮಾರ್‌ ಒತ್ತಾಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 13:29 IST
Last Updated 28 ನವೆಂಬರ್ 2022, 13:29 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ಚಿತ್ರದುರ್ಗ: ‘ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಸರಣಿ ಹತ್ಯೆ ನಡೆಯುತ್ತದೆ’ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಯನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ‘ಕೋಮುಭಾವನೆ ಪ್ರಚೋದಿಸಿದ ಆರೋಪದಡಿ ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಸೋಮವಾರ ಹಮ್ಮಿಕೊಂಡಿದ್ದ ‘ಸಂವಿಧಾನ ಬಚಾವೊ’ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

‘ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಬಿಜೆಪಿ ಆಡಳಿತದಲ್ಲಿ ರಾಜ್ಯ ದಿವಾಳಿಯತ್ತ ಸಾಗುತ್ತಿದೆ. ಮತದಾರರ ಮಾಹಿತಿ ಕಳವು ಮಾಡಿದ ಹಗರಣ ಬಯಲಿಗೆ ಬಂದಿದೆ. ಸರ್ಕಾರದ ತಪ್ಪುಗಳನ್ನು ಮುಚ್ಚಿಕೊಳ್ಳಲು ಹವಣಿಸುತ್ತಿರುವ ಬಿಜೆಪಿ, ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದೆ. ಪ್ರತಿ ಹಳ್ಳಿಯಲ್ಲಿ ಕೋಮುಗಲಭೆ ನಡೆಸಲು ಷಡ್ಯಂತ್ರ ರೂಪಿಸಿದೆ’ ಎಂದು ಆರೋಪಿಸಿದರು.

ADVERTISEMENT

‘ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಕಾರ್ಯಕರ್ತರು ಅಪಪ್ರಚಾರ ಮಾಡಿದರೆ ಪ್ರಕರಣ ದಾಖಲಿಸುತ್ತಿಲ್ಲ. ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಮಾತ್ರ ಕಾನೂನು ಅಸ್ತ್ರ ಬಳಸಲಾಗುತ್ತಿದೆ. ರಾಜ್ಯದ ಶಾಂತಿಯ ಉದ್ದೇಶದಿಂದ ಸಿ.ಟಿ.ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್‌ ಮಹಾನಿರ್ದೇಶಕರು ಹಾಗೂ ಮುಖ್ಯಮಂತ್ರಿ ಮುಂದಾಗಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.