ADVERTISEMENT

ಕೆಪಿಸಿಸಿ ಪಟ್ಟಿಗಾಗಿ ದೆಹಲಿಗೆ ಡಿಕೆಶಿ: ಜೆಡಿಎಸ್‌ ಶಾಸಕರ ಸೇರ್ಪಡೆ ಬಗ್ಗೆ ಚರ್ಚೆ

ಜೆಡಿಎಸ್‌ ಶಾಸಕರ ಸೇರ್ಪಡೆ ಬಗ್ಗೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 20:16 IST
Last Updated 26 ಸೆಪ್ಟೆಂಬರ್ 2021, 20:16 IST
   

ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಅಂತಿಮಗೊಳಿಸುವುದು ಸೇರಿದಂತೆ ಪಕ್ಷ ಸಂಘಟನೆಯ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ವರಿಷ್ಠರ ಭೇಟಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಭಾನುವಾರ ಮಧ್ಯಾಹ್ನ ದೆಹಲಿಗೆ ತೆರಳಿದ್ದಾರೆ.

ಎರಡು ದಿನ ದೆಹಲಿಯಲ್ಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೇವಾಲಾ ಅವರನ್ನು ಶಿವಕುಮಾರ್ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜೆಡಿಎಸ್‌, ಬಿಜೆಪಿಯಿಂದ ಕಾಂಗ್ರೆಸ್‌ ಸೇರಲು ಮುಂದಾಗಿರುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆಯೂ ಅವರು ಹೈಕಮಾಂಡ್ ಜೊತೆ ಚರ್ಚಿಸಲಿದ್ದಾರೆ. ಜೆಡಿಎಸ್‌ ಶಾಸಕರಾದ ಜಿ. ಟಿ. ದೇವೇಗೌಡ ಮತ್ತು ಶ್ರೀನಿವಾಸಗೌಡ ಅವರು ಕಾಂಗ್ರೆಸ್‌ ಸೇರುವ ಇಂಗಿತವನ್ನು ಈಗಾಗಲೇ ವ್ಯಕ್ತಪಡಿಸಿದ್ದಾರೆ. ಜೆಡಿಎಸ್‌ನ ಇನ್ನೂ ಕೆಲವು ಶಾಸಕರು ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗೆಗಿನ ಸಾಧಕ– ಬಾಧಕಗಳ ಬಗ್ಗೆಯೂ ವರಿಷ್ಠರಿಗೆ ವಿವರಿಸಲಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ADVERTISEMENT

ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ವರ್ಷದಿಂದ ನನೆಗುದಿಗೆ ಬಿದ್ದಿದೆ. ಪಟ್ಟಿ ಅಂತಿಮಗೊಳಿಸುವ ಬಗ್ಗೆ ಈಗಾಗಲೇ ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಜೊತೆ ವರಿಷ್ಠರು ಚರ್ಚಿಸಿದ್ದಾರೆ. ಇತ್ತೀಚೆಗೆ ರಾಜ್ಯಕ್ಕೆ ಬಂದಿದ್ದ ಸುರ್ಜೇವಾಲಾ, ಜಿಲ್ಲಾಮಟ್ಟದ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಪಕ್ಷದ ಮುಂಚೂಣಿಯ ಘಟಕಗಳ ನೇತೃತ್ವವನ್ನು ಹೊಸಬರಿಗೆ ವಹಿಸುವ, ಕೆಲವು ಜಿಲ್ಲಾ ಘಟಕಗಳ ಅಧ್ಯಕ್ಷರ ಬದಲಾವಣೆಯ ಬಗ್ಗೆಯೂ ಚರ್ಚೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.