ಡಿ.ಕೆ. ಸುರೇಶ್
ಬೆಂಗಳೂರು: ‘ನೀರಾವರಿ ಯೋಜನೆಗಳಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಬಿಜೆಪಿಯ ಸಂಸದರು ಮತ್ತು ಕೇಂದ್ರ ಸಚಿವರು ಹೋರಾಟ ಮಾಡಬೇಕು’ ಎಂದು ಕಾಂಗ್ರೆಸ್‌ನ ಮಾಜಿ ಸಂಸದರೂ ಆಗಿರುವ ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಆಗ್ರಹಿಸಿದರು.
ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಮಹದಾಯಿ ಯೋಜನೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಗೋವಾ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವುದು ಎದ್ದು ಕಾಣುತ್ತಿದೆ’ ಎಂದರು.
‘ಕುಡಿಯುವ ನೀರಿನ ವಿಚಾರವಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸುವ ಮೂಲಕ ಮಹದಾಯಿ, ಮೇಕೆದಾಟು ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಬೇಕು’ ಎಂದರು.
‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮೂರು ಬಾರಿ ಅಧಿಕಾರಕ್ಕೆ ಬರಲು ಕರ್ನಾಟಕ ಜನರ ಕೊಡುಗೆ ಮಹತ್ತರವಾದದ್ದು. ಆದರೂ ಬಿಜೆಪಿ ಸಂಸದರು, ಕೇಂದ್ರದ ಸಚಿವರು ಈ ವಿಚಾರವಾಗಿ ಚಕಾರ ಎತ್ತುತ್ತಿಲ್ಲ’ ಎಂದು ದೂರಿದರು.
‘ತಮ್ಮದೇ ಜನರ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನಸ್ಸು ಮಾಡಬೇಕು. ಆದರೆ, ಅವರಿಗೆ ಕರ್ನಾಟಕದ ಹಿತ ಬೇಕಿಲ್ಲ. ಆದರೂ ಕರ್ನಾಟಕದ ಜನ ಅವರನ್ನೇ ಬಯಸಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.