ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರನ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದರು.
ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಗುರುವಾರ ನಡೆದ ಆಹಾರ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಆ ಬಳಿಕ, ಅಂತಹವರಿಗೆ ನೋಟಿಸ್ ನೀಡಿ ಕಾರ್ಡ್‌ಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಈಗಾಗಲೇ ಬಿಪಿಎಲ್ ಪಟ್ಟಿಯಿಂದ ನಾಲ್ಕು ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದೂ ವಿವರಿಸಿದರು.
ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ ₹4,692 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ ₹3,253 ಕೋಟಿ ವೆಚ್ಚ ಮಾಡಲಾಗಿದೆ. 4.45 ಕೋಟಿ ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಒಟ್ಟು 4,518 ಪೆಟ್ರೋಲ್ ಬಂಕ್‌ಗಳಿದ್ದು, ಡಿಸೆಂಬರ್ ಅಂತ್ಯದವರೆಗೆ 503 ಪೆಟ್ರೋಲ್ ಬಂಕ್ ತಪಾಸಣೆ ಮಾಡಲಾಗಿದೆ. ಪೆಟ್ರೋಲ್ ಬಂಕ್ ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಅವರು ಸೂಚಿಸಿದರು.
ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.