ನಗರದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನ ದ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಪ್ರಜಾವಾಣಿ ಚಿತ್ರ
ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಮತದಾನದ ಪಾತ್ರ ಮಹತ್ವದ್ದು. ಯುವಜನರು ಮತ ಚಲಾಯಿಸುವ ತಮ್ಮ ಜವಾಬ್ದಾರಿಯನ್ನು ಲಘುವಾಗಿ ಪರಿಗಣಿಸಬಾರದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹೇಳಿದರು.
ನಗರದಲ್ಲಿ ಚುನಾವಣಾ ಆಯೋಗ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನ–2025 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನರಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಜ್ಞಾನಪಿಸುವುದರ ಜತೆಗೆ ಅರಿವು ಮೂಡಿಸುವುದು ಮತದಾರರ ದಿನದ ಉದ್ದೇಶವಾಗಿದೆ ಎಂದರು.
‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಜನರ ಆಶಯ ಮತ್ತು ಆಶೋತ್ತರಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತವೆ. ಹಾಗಾಗಿ ಮತದಾನ ನಮ್ಮ ಹಕ್ಕು ಮಾತ್ರವಲ್ಲ, ಕರ್ತವ್ಯವೂ ಆಗಿದೆ’ ಎಂದು ತಿಳಿಸಿದರು.
‘ದೇಶದಲ್ಲಿ 18ರಿಂದ 24 ವರ್ಷದೊಳಗಿನವರು ಮತದಾನದಲ್ಲಿ ಹೆಚ್ಚು ಆಸಕ್ತಿ ವಹಿಸುತ್ತಿಲ್ಲ ಎಂಬುದು ಅಂಕಿಅಂಶದಿಂದ ಗೊತ್ತಾಗಿದೆ. ದೇಶದ ಹಿತ ಮತ್ತು ಅಭಿವೃದ್ಧಿಗಾಗಿ ಮತ ಚಲಾಯಿಸಬೇಕು’ ಎಂದರು.
ಇದೇ ವೇಳೆ ಚುನಾವಣೆ ನಿರ್ವಹಣೆ, ಸುಗಮ ಚುನಾವಣೆ, ಮತದಾರರ ಪಟ್ಟಿ ಮತ್ತು ಮತದಾನ ಅರಿವು ಮೂಡಿಸುವಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಪ್ರಮುಖರು ಮತ್ತು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮೊದಲನೆ ಬಾರಿ ಮತದಾನ ಮಾಡುವ ಯುವ ಮತದಾರರು, ಅಂಗವಿಕಲರು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಬುಡಕಟ್ಟು ಜನಾಂಗದವರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಅಧಿಕಾರಿಗಳು, ವಿದ್ಯಾರ್ಥಿಗಳು ಸೇರಿದಂತೆ 1500ಕ್ಕೂ ಹೆಚ್ಚು ಮಂದಿ ಮತದಾನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾತನಾಡಿ, ‘2024ರ ಲೋಕಸಭಾ ಚುನಾವಣೆಯಲ್ಲಿ 66 ಕೋಟಿ ಮತದಾರರು ಭಾಗವಹಿಸಿದ್ದರು. ಕರ್ನಾಟಕದಲ್ಲಿ 5.48 ಕೋಟಿ ಮತದಾರರ ಪೈಕಿ 3.88 ಕೋಟಿ ಮತದಾರರು ಹಕ್ಕು ಚಲಾಯಿಸಿದ್ದರು’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕೂರ್ಮರಾವ್, ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಸ್ವೀಪ್ ನೋಡಲ್ ಅಧಿಕಾರಿ ಪಿ.ಎನ್. ವಸ್ತ್ರದ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.