ADVERTISEMENT

ಖಾಸಗಿ ಫೋಟೊಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ರೋಹಿಣಿ ಸಿಂಧೂರಿ ಮನವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಫೆಬ್ರುವರಿ 2023, 13:47 IST
Last Updated 20 ಫೆಬ್ರುವರಿ 2023, 13:47 IST
ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ
ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ   

ಬೆಂಗಳೂರು: ಸಾಮಾಜಿಕ ಮಾಧ್ಯಮಗಳು ಹಾಗೂ ವಾಟ್ಸ್‌ಆ್ಯಪ್‌ ಸ್ಟೇಟಸ್‌ಗಳ ಸ್ಕ್ರೀನ್‌ಶಾಟ್‌ ಮೂಲಕ ಸಂಗ್ರಹಿಸಿದ ತಮ್ಮ ಫೋಟೊಗಳನ್ನು ಮಾಧ್ಯಮಗಳಲ್ಲಿ ಬಳಸದಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರಕಟಣೆ ಮೂಲಕ ತಿಳಿಸಿರುವ ಸಿಂಧೂರಿ, ಸಾಮಾಜಿಕ ಮಾಧ್ಯಮಗಳು ಹಾಗೂ ವಾಟ್ಸ್‌ಆ್ಯಪ್‌ ಸ್ಟೇಟಸ್‌ಗಳ ಸ್ಕ್ರೀನ್‌ಶಾಟ್‌ ಮೂಲಕ ಸಂಗ್ರಹಿಸಿದ ಫೋಟೊಗಳನ್ನು ತಮ್ಮ ತೇಜೋವಧೆ ಮಾಡಲು ಐಪಿಎಸ್‌ ಅಧಿಕಾರಿ ರೂಪಾ ಬಳಸಿದ್ದಾರೆ. ಒಬ್ಬ ಹಿರಿಯ ಅಧಿಕಾರಿಯಾಗಿ, ಅದರಲ್ಲೂ ಮಹಿಳೆಯಾಗಿ ಇನ್ನೊಬ್ಬ ಮಹಿಳೆಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಕಾನೂನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಶ್ರೀಘ್ರವೇ ಕಾನೂನು ಕ್ರಮ ಕೈಗೊಳ್ಳಲಿದ್ದೇನೆ ಎಂದು ಹೇಳಿದ್ದಾರೆ.

ಮುಂದುವರಿದು, ರೂಪಾ ಅವರು ಹಂಚಿಕೊಂಡಿರುವ ಚಿತ್ರಗಳನ್ನು ಮಾಧ್ಯಮಗಳಲ್ಲಿ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಒಬ್ಬರು ವೈಯಕ್ತಿಕ ಹಗೆತನದ ಉದ್ದೇಶಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಫೋಟೊಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡುತ್ತಿರುವುದು ನೋವಿನ ಸಂಗತಿ. ಹೀಗಾಗಿ, ನನ್ನ ವೈಯಕ್ತಿಕ ಫೋಟೊಗಳನ್ನು ಮಾಧ್ಯಮಗಳಲ್ಲಿ ಬಳಸದಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಸಂಧಾನ ಯತ್ನ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ರೋಹಿಣಿ ವಿರುದ್ಧ ಸಾಮಾಜಿಕ ಮಾಧ್ಯಮಗಳ ಮೂಲಕ ಕಿಡಿಕಾರಿದ್ದ ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್, ಕರ್ತವ್ಯ ಲೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದರು. ಅಷ್ಟಲ್ಲದೆ, ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೊಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡು, ಹಲವು ಅನುಮಾನದ ಪ್ರಶ್ನೆಗಳನ್ನು ಕೇಳಿದ್ದರು.

ತಮ್ಮ ವಿರುದ್ಧ ರೂಪಾ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸಿಂಧೂರಿ, ಮಾನಸಿಕ ಅಸ್ವಸ್ಥತೆ ಬಹುದೊಡ್ಡ ಸಮಸ್ಯೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಈ ರೀತಿ ವರ್ತಿಸುವುದು ಅಪಾಯಕಾರಿ. ಡಿ.ರೂಪಾ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ನನ್ನ ಮೇಲೆ ಹಗೆ ತೀರಿಸಿಕೊಳ್ಳಲು ಮಾನಸಿಕ ಸ್ಥಿಮಿತತೆ ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ರೋಹಿಣಿ ಸಿಂಧೂರಿ ಅವರು ಮಾಧ್ಯಮಗಳಿಗೆ ಮಾಡಿರುವ ಮನವಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.