ADVERTISEMENT

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ನಾಲ್ಕು ದಿನಗಳಲ್ಲಿ ಕಾರ್ಯಪಡೆ ವರದಿ

ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 20:05 IST
Last Updated 6 ಸೆಪ್ಟೆಂಬರ್ 2020, 20:05 IST
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ   

ಬೆಂಗಳೂರು: ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತು ರಚಿಸಿರುವ ಕಾರ್ಯಪಡೆ ನಾಲ್ಕು ದಿನಗಳಲ್ಲಿ ವರದಿ ಸಲ್ಲಿಸಲಿದ್ದು, ಆ ಬಳಿಕ ಹೊಸ ನೀತಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್‌ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರೊಂದಿಗೆ ಭಾನುವಾರ ನಡೆದ ವಿಡಿಯೊ ಸಂವಾದದಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ನೀತಿಯನ್ನು ಎಷ್ಟು ಹಂತಗಳಲ್ಲಿ, ಹೇಗೆ ಅನುಷ್ಠಾನಕ್ಕೆ ತರಬೇಕು ಎಂಬುದನ್ನು ಕಾರ್ಯಪಡೆಯು ವರದಿಯಲ್ಲಿ ತಿಳಿಸಲಿದೆ. ಈ ವರದಿ ಆಧರಿಸಿ ಮುಂದಿನ ಹೆಜ್ಜೆ ಇಡಲಾಗುವುದು’ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆಗೂ ಸಂವಾದ ನಡೆಸಲಾಗಿದೆ. ವಿವಿಧ ಕ್ಷೇತ್ರಗಳ ತಜ್ಞರ ಜತೆಗೂ ಸಮಾಲೋಚನೆ ನಡೆಸಲಾಗಿದೆ. ಹೊಸ ನೀತಿಯ ಕುರಿತು ಸಮಾಜದ ಎಲ್ಲ ವರ್ಗಗಳಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಕೇಂದ್ರ ಸಚಿವರಿಗೆ ಮಾಹಿತಿ ನೀಡಿದರು.

ADVERTISEMENT

ಹೊಸ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಪೂರಕವಾಗಿ ಕಾನೂನು ಮತ್ತು ನಿಯಮಗಳಿಗೆ ತಿದ್ದುಪಡಿ ತರುವ ಪ್ರಕ್ರಿಯೆಯೂ ಆರಂಭವಾಗಿದೆ. ಶಿಕ್ಷಣ ಸಂಸ್ಥೆಗಳ ಸಾಂಸ್ಥಿಕ ರಚನೆಯಲ್ಲೂ ಬದಲಾವಣೆಗೆ ಸಿದ್ಧತೆ ನಡೆದಿದೆ. ಹೊಸ ನೀತಿ ಜಾರಿಯಾದ ಬಳಿಕ ಅಧಿಕಾರ ವಿಕೇಂದ್ರೀಕರಣವಾಗಲಿದೆ. ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ಲಭಿಸಲಿದೆ. ಬೋಧನೆ ಮತ್ತು ಸಂಶೋಧನೆಯಲ್ಲಿ ಹೊಸತನ ತರುವುದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.