
ಪ್ರಿಯಾಂಕ್ ಖರ್ಗೆ
ಸುವರ್ಣಸೌಧ (ಬೆಳಗಾವಿ): ‘ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಸರ್ಕಾರಕ್ಕೆ ಸವಾಲಾಗಿದ್ದು, ಪರಿಹಾರ ಕಂಡುಕೊಳ್ಳಲು ಮತ್ತಷ್ಟು ಸಮಯ ಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಸಹಾಯಕತೆ ವ್ಯಕ್ತಪಡಿಸಿದರು.
ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಯು.ಬಿ. ಬಣಕಾರ್ ಅವರು ಹಾವೇರಿ ಜಿಲ್ಲೆಯಲ್ಲಿ ಫ್ಲೋರೈಡ್ ಯುಕ್ತ ನೀರು ಹೆಚ್ಚಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್, ‘ರಾಜ್ಯದಲ್ಲಿ ನೀರಿನ ಗುಣಮಟ್ಟ ಪರೀಕ್ಷೆ ಕಾರ್ಯ ಭರದಿಂದ ಸಾಗಿದೆ. ಕಳೆದ ಸರ್ಕಾರದ ಅವಧಿಯಲ್ಲಿ 5.13 ಲಕ್ಷ ನೀರಿನ ಗುಣಮಟ್ಟ ಪರೀಕ್ಷೆ ನಡೆದಿತ್ತು. ಕಳೆದ ಎರಡೂವರೆ ವರ್ಷಗಳಲ್ಲಿ 13.20 ಲಕ್ಷ ಪರೀಕ್ಷೆ ಮಾಡಲಾಗಿದೆ. ಈ ವರ್ಷದಲ್ಲಿ ಮಾತ್ರ 6.50 ಪಕ್ಷ ಪರೀಕ್ಷೆ ನಡೆಸಲಾಗಿದೆ’ ಎಂದರು.
‘ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದೊಂದಿಗೆ ರಾಜ್ಯದಲ್ಲಿ ಸಾವಿರಾರು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಲಾಗಿದೆ. ಹೀಗೆ ಅಳವಡಿಕೆ ಮಾಡಲಾಗಿರುವ ಘಟಕಗಳ ನಿರ್ವಹಣೆ ದೊಡ್ಡ ಸಮಸ್ಯೆಯಾಗಿದ್ದು, ಅದನ್ನು ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸುತ್ತಿದೆ’ ಎಂದರು.
‘ರಾಜ್ಯದಲ್ಲಿ ಸಂಸದರ, ಶಾಸಕರ ಹಾಗೂ ಸಿಎಸ್‌ಆರ್ ಅನುದಾನ ಸೇರಿದಂತೆ ಮತ್ತಿತರ ಅನುದಾನಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಹೀಗೆ ಸ್ಥಾಪಿಸುವ ಘಟಕಗಳ ನಿರ್ವಹಣೆಯನ್ನು ಯಾರು ಮಾಡಬೇಕು ಎಂಬ ಪ್ರಶ್ನೆ ಉದ್ಭವಿಸುತ್ತಿದೆ. ಆಯಾ ಗ್ರಾಮ ಪಂಚಾಯಿತಿಗಳಿಂದ ನಿರ್ವಹಣೆ ಮಾಡಲು ಅನುದಾನದ ಕೊರತೆಯಿದೆ. ಅಲ್ಲದೆ, ಘಟಕಗಳನ್ನು ಹಸ್ತಾಂತರಿಸದ ಕಾರಣ ಸಮಸ್ಯೆ ಉಂಟಾಗುತ್ತಿದೆ’ ಎಂದರು.
ಆಗ ಕಾಂಗ್ರೆಸ್‌ನ ಕೆ. ಷಡಕ್ಷರಿ, ‘ಆಯಾ ಜಿಲ್ಲಾ ಪಂಚಾಯಿತಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಹೊಣೆ ನೀಡಬೇಕು’ ಎಂದು ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.