
ಬೆಂಗಳೂರು: ‘ಗ್ರಾಮೀಣ ಪ್ರದೇಶಗಳ ಸುಮಾರು ಒಂದು ಕೋಟಿ ಆಸ್ತಿಗಳನ್ನು ‘ಇ-ಸ್ವತ್ತು’ ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು’ ಎಂದು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (ಸಿಇಒ) ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.
‘ಇ-ಸ್ವತ್ತು’ ಅನುಷ್ಠಾನ ಮತ್ತು ಇತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಮಂಗಳವಾರ ನಡೆಸಿದ ಅವರು, ‘ಈ ಕುರಿತ ನಿಯಮಗಳನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನನ ಮಾಡಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ಆಯೋಜಿಸಬೇಕು’ ಎಂದು ಸಲಹೆ ನೀಡಿದರು.
‘ಲಕ್ಷಾಂತರ ಜನರು ಈ ಯೋಜನೆಯ ಲಾಭ ಪಡೆಯಲು ಕಾಯುತ್ತಿದ್ದಾರೆ. ಸಾರ್ವಜನಿಕರಿಗೆ ಸುಲಲಿತವಾಗಿ ಹಾಗೂ ಪಾರದರ್ಶಕವಾಗಿ ಇ–ಸ್ವತ್ತು ಪ್ರಯೋಜನ ದೊರೆಯುವಂತೆ ಸಿಬ್ಬಂದಿಯನ್ನು ಸಜ್ಜು ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವು ಪಡೆದು ಈ ಆಂದೋಲನವನ್ನು ಯಶಸ್ವಿಗೊಳಿಸಬೇಕು’ ಎಂದು ಸೂಚನೆ ನೀಡಿದರು.
ಕೆಲವು ಜಿಲ್ಲೆಗಳಲ್ಲಿ ಆಸ್ತಿತೆರಿಗೆ ಸಂಗ್ರಹ ಕುಂಠಿತವಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರಿಯಾಂಕ್, ‘ತೆರಿಗೆ ವಸೂಲಾತಿಗೆ ಆದ್ಯತೆ ನೀಡಲು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸೂಚನೆ ನೀಡಲು ಹಾಗೂ ಸಭೆ, ವಿಮರ್ಶೆ, ಸ್ಥಳ ಪರೀಕ್ಷೆ ಮೂಲಕ ಗಮನಹರಿಸಲು ತಾಲ್ಲೂಕು ಪಂಚಾಯತಿ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದರು.
‘ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕು. ಕೆಳ ಹಂತದ ಅಧಿಕಾರಿಗಳಿಗೆ ಕಳುಹಿಸಿದ ದೂರುಗಳ ಸ್ಥಿತಿಗತಿಗಳ ವಿವರಗಳನ್ನು ಪಡೆದು, ಸಮಸ್ಯೆ ಬಗೆಹರಿದ ನಂತರ ದೂರುದಾರರಿಗೆ ಉತ್ತರ ನೀಡಬೇಕು’ ಎಂದು ಸಲಹೆ ನೀಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲಾ, ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಅರುಂಧತಿ ಚಂದ್ರಶೇಖರ್ ಮತ್ತು ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.