ADVERTISEMENT

‘ಪ್ರಬಲ ಜಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಿ’

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2022, 1:42 IST
Last Updated 16 ಮಾರ್ಚ್ 2022, 1:42 IST

ಬೆಂಗಳೂರು: ‘ಪ್ರಬಲ ಜಾತಿಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿದೆ. ಮೀಸಲಾತಿ ಜಾರಿಗೊಳಿಸದಿದ್ದರೆ ರಾಜ್ಯದಾದ್ಯಂತ ಜನಾಂದೋಲನ ರೂಪಿಸಲಾಗುತ್ತದೆ’ ಎಂದು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಡಾ.ಶಂಕರ್‌ ಗುಹಾ ದ್ವಾರಕನಾಥ್‌ ಬೆಳ್ಳೂರು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಕೇಂದ್ರ ಸರ್ಕಾರವು 2019ರ ಜನವರಿಯಲ್ಲಿ ಮೀಸಲು ಸೌಲಭ್ಯ ಕಲ್ಪಿಸಿ ಆದೇಶ ಹೊರಡಿಸಿದೆ. ಇದಕ್ಕಾಗಿಸಂವಿಧಾನಕ್ಕೆ ತಿದ್ದುಪಡಿಯನ್ನೂ ತಂದಿದೆ. ಹಲವು ರಾಜ್ಯಗಳು ಇದನ್ನು ಕಾರ್ಯಗತಗೊಳಿಸಲು ಮುಂದಾಗಿವೆ. ಸಾಮಾನ್ಯ ವರ್ಗಕ್ಕೆ ಸೇರಿದ ಬಡ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶ ಕಲ್ಪಿಸುವುದು ಇದರ ಉದ್ದೇಶ. ಇದನ್ನು ಬಸವರಾಜ ಬೊಮ್ಮಾಯಿ ಅವರು ಅರ್ಥಮಾಡಿಕೊಳ್ಳಬೇಕು. ಪ್ರಬಲ ಜಾತಿಗಳಲ್ಲಿ ಆರ್ಥಿಕವಾಗಿ ಹಿಂದುಳಿದವರನ್ನು ಕಡೆಗಣಿಸುವುದು ಸರಿಯಲ್ಲ’ ಎಂದರು.

‘ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸುವ ಸಲುವಾಗಿಯೇ ಆರ್ಥಿಕವಾಗಿ ಹಿಂದುಳಿದ ವರ್ಗದವರ (ಇಡಬ್ಲ್ಯುಎಸ್‌) ಮೀಸಲಾತಿ ಹೋರಾಟ ಸಮಿತಿ ರಚಿಸಿದ್ದೇವೆ’ ಎಂದು ತಿಳಿಸಿದರು.

ADVERTISEMENT

ಪ್ರೊ.ಕೆ.ಇ.ರಾಧಾಕೃಷ್ಣ, ಕಾರ್ಯದರ್ಶಿ ಎಚ್‌.ಎ.ಶ್ರೀನಿವಾಸ್‌, ಸದಸ್ಯರಾದ ಡಾ.ಆಡೂರು ಗುರುಚರಣ್‌ ಹಾಗೂ ಬಿ.ಎಸ್‌.ದತ್ತಾತ್ರೇಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.