ADVERTISEMENT

ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ‘ಇ.ಡಿ’ ಅಸ್ತ್ರ: ಸಚಿವರ ಆರೋಪ

ಸಿ.ಎಂ, ಡಿಸಿಎಂ ಹೆಸರು ಹೇಳುವಂತೆ ಅಧಿಕಾರಿಗಳ ಮೇಲೆ ಒತ್ತಡ, ಪಂಚ ಸಚಿವರ ಆರೋಪ

​ಪ್ರಜಾವಾಣಿ ವಾರ್ತೆ
Published 18 ಜುಲೈ 2024, 16:23 IST
Last Updated 18 ಜುಲೈ 2024, 16:23 IST
<div class="paragraphs"><p>ಇ.ಡಿ</p></div>

ಇ.ಡಿ

   

(ಸಂಗ್ರಹ ಚಿತ್ರ)

ಬೆಂಗಳೂರು: ‘ವಾಲ್ಮೀಕಿ ನಿಗಮದ ಹಗರಣದ ನೆಪದಲ್ಲಿ ಜಾರಿ ನಿರ್ದೇಶನಾಲಯವನ್ನು (ಇ.ಡಿ) ಬಳಸಿಕೊಂಡು ರಾಜ್ಯ ಸರ್ಕಾರ  ಅಸ್ಥಿರಗೊಳಿಸುವ ಪ್ರಯತ್ನವನ್ನು ಕೇಂದ್ರ ಮಾಡುತ್ತಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕೆಲ ಸಚಿವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಸಿದ್ದರಾಮಯ್ಯ ಸಂಪುಟದ ಐವರು ಸಚಿವರು ಆರೋಪಿಸಿದರು.

ADVERTISEMENT

ವಿಧಾನಸೌಧದಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣ ಬೈರೇಗೌಡ, ದಿನೇಶ್‌ ಗುಂಡೂರಾವ್‌, ಪ್ರಿಯಾಂಕ್‌ ಖರ್ಗೆ, ಸಂತೋಷ್‌ ಲಾಡ್ ಅವರು, ಸರ್ಕಾರದ ಪ್ರಮುಖರ ಹೆಸರು ಹೇಳುವಂತೆ ಬಂಧಿತ ಅಧಿಕಾರಿಗಳ ಮೇಲೆ ಇ.ಡಿ ಒತ್ತಡ ಹೇರುತ್ತಿದೆ ಎಂದು ದೂರಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ‘ಕೇಂದ್ರ ಸರ್ಕಾರದ ನಡೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಹಗರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹೆಸರು ಹೇಳುವಂತೆ ಇ.ಡಿ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ. ಹೆಸರು ಹೇಳಿದರೆ ಪ್ರಕರಣದಲ್ಲಿ ನಿಮಗೆ ಅನುಕೂಲ ಮಾಡಲಾಗುತ್ತದೆ. ತಪ್ಪೊಪ್ಪಿಗೆ ನೀಡದಿದ್ದರೆ ಸಂಕಷ್ಟಕ್ಕೆ ಸಿಲುಕುತ್ತೀರಿ ಎಂದು ಬೆದರಿಸಲಾಗುತ್ತಿದೆ. ಇಂತಹ ಗೊಡ್ಡು ಬೆದರಿಕೆಗಳಿಗೆ ಬಗ್ಗುವ ಮಾತೇ ಇಲ್ಲ’ ಎಂದರು.

‘ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಎನ್‌ಡಿಎ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಚುನಾಯಿತ ಸರ್ಕಾರವನ್ನೇ ಬುಡಮೇಲು ಮಾಡುವ ಕೆಲಸಕ್ಕೆ ಮುಂದಾಗಿದೆ. ರಾಜ್ಯದಲ್ಲಿ ದುರ್ಬಲವಾಗಿರುವ ಬಿಜೆಪಿ ನಾಯಕರು ವಾಮಮಾರ್ಗದಲ್ಲಿ ಮತ್ತೆ ಅಧಿಕಾರ ಕಬಳಿಸಲು ಯತ್ನಿಸುತ್ತಿದ್ದಾರೆ. ಸಿಬಿಐ ಹಾಗೂ ಆದಾಯ ತೆರಿಗೆ ಇಲಾಖೆಗಳನ್ನು ವಿರೋಧ ಪಕ್ಷಗಳ ವಿರುದ್ಧ ‘ಸರ್ಜಿಕಲ್‌ ಸ್ಟ್ರೈಕ್‌’ ರೀತಿ ಬಳಕೆ ಮಾಡಲಾಗುತ್ತಿದೆ. 2008, 2019ರಂತೆ ಈಗಿನ ಪರಿಸ್ಥಿತಿಯಲ್ಲಿ ಆಪರೇಷನ್‌ ಕಮಲ ಅಸಾಧ್ಯವೆಂದು ಮನಗಂಡು ಸರ್ಕಾರವನ್ನೇ ಉರುಳಿಸಲು ಸಂಚು ರೂಪಿಸಿದ್ದಾರೆ’ ಎಂದರು.

‘ಬಿಜೆಪಿಗೆ ಎಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲವೋ, ಅಲ್ಲೆಲ್ಲಾ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಆಡಳಿತ ಪಕ್ಷಗಳ ಮೇಲೆ ದಾಳಿ ಮಾಡುವುದು ವಾಡಿಕೆಯಾಗಿದೆ. ಬಿಜೆಪಿಯ ಇಂತಹ ನೀಚ ನಡೆಗಳಿಗೆ ಮಹಾರಾಷ್ಟ್ರ ಸೇರಿದಂತೆ ಹಲವೆಡೆ ಬಿಜೆಪಿಯೇತರ ಪಕ್ಷಗಳ ಸರ್ಕಾರಗಳು ಪತನವಾಗಿವೆ. 444 ಶಾಸಕರನ್ನು ಖರೀದಿಸಲಾಗಿದೆ‌‌. ಯುಪಿಎ ಇದ್ದಾಗ ಶೇ 47ರಷ್ಟು ಪ್ರಕರಣಗಳಲ್ಲಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ನಾಯಕರ ಮೇಲೂ ದಾಖಲಾಗಿದ್ದವು ಎಂದು ಹೇಳಿದರು.  

ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.