ADVERTISEMENT

ವಿದ್ಯಾರ್ಥಿ ಸಾವು ಪ್ರಕರಣ: ತನಿಖೆಗೆ ಆದೇಶಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಆಗಸ್ಟ್ 2021, 8:20 IST
Last Updated 15 ಆಗಸ್ಟ್ 2021, 8:20 IST
ಬಿ.ಸಿ.ನಾಗೇಶ್‌
ಬಿ.ಸಿ.ನಾಗೇಶ್‌    

ಬೆಂಗಳೂರು: ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದು ತನಿಖೆ ನಡೆಸಲು ಸೂಚಿಸುತ್ತೇನೆ ಎಂದು ಪ್ರಾಥಮಿಕ ಮತ್ತು ಪೌಢ್ರಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ತುಮಕೂರು ಜಿಲ್ಲೆ ಕರೀಕೆರೆ ಎಂಬಲ್ಲಿ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವಾಗ ವಿದ್ಯುತ್ ಸ್ಪರ್ಶದಿಂದ ಚಂದನ್ ಎಂಬ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ತಿಳಿದು ಆಘಾತವಾಯಿತು. ಜತೆಗೆ ಪವನ್ ಮತ್ತು ಶಶಾಂಕ್ ಎಂಬ ಮತ್ತಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಯಿತು. ಇದು ಅತ್ಯಂತ ದುರದೃಷ್ಟಕರ ಘಟನೆ’ ಎಂದಿದ್ದಾರೆ.

‘ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳನ್ನು ತಿಳಿಸಲು ಬಯಸುತ್ತೇನೆ. ಅವರ ದುಃಖ ಶಬ್ದಗಳಿಂದ ಶಮನ ಮಾಡಲು ಸಾಧ್ಯವಿಲ್ಲ. ಗಾಯಗೊಂಡ ವಿದ್ಯಾರ್ಥಿಗಳ ಚಿಕಿತ್ಸೆಗೆ ಕೂಡಲೇ ಬೇಕಾದ ಎಲ್ಲ ಸೌಲಭ್ಯ ಒದಗಿಸುವಂತೆ ತಿಳಿಸಿದ್ದೇನೆ. ಈ ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ತನಿಖೆ ನಡೆಸಲು ಸೂಚಿಸುತ್ತೇನೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.