ಬೆಂಗಳೂರು: ಕೊರೊನಾ ಸೋಂಕಿತರಾಗಿದ್ದ ಬೆಳಗಾವಿಯ ಬೆನಕನಹಳ್ಳಿ ಗ್ರಾಮದ 70 ವರ್ಷದ ವೃದ್ಧರೊಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದು, ಈ ವರ್ಷ ರಾಜ್ಯದಲ್ಲಿ ವರದಿಯಾದ ಎರಡನೇ ಕೋವಿಡ್ ಮರಣ ಪ್ರಕರಣ ಇದಾಗಿದೆ.
ಅವರು ಮಧುಮೇಹ, ಅಧಿಕ ರಕ್ತದೊತ್ತಡ, ಮೂತ್ರಪಿಂಡ ಹಾಗೂ ಹೃದಯ ಸಂಬಂಧಿ ಸಮಸ್ಯೆ ಎದುರಿಸುತ್ತಿದ್ದರು. ಉಸಿರಾಟ ಸಂಬಂಧಿ ತೊಂದರೆ ಕಾರಣ ಅವರನ್ನು ಇದೇ 26 ರಂದು ಅಲ್ಲಿನ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತದಲ್ಲಿನ ಆಮ್ಲಜನಕ ಪ್ರಮಾಣವು 88ಕ್ಕೆ ಇಳಿಕೆಯಾದ ಕಾರಣ, ಬುಧವಾರದಂದು ಕೋವಿಡ್ ಪರೀಕ್ಷೆಗೆ ಗಂಟಲ ದ್ರವವನ್ನು ಸಂಗ್ರಹಿಸಲಾಗಿತ್ತು. ‘ರ್‍ಯಾಪಿಡ್ ಆ್ಯಂಟಿಜನ್’ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟ ಕಾರಣ, ಆರ್‌ಟಿಪಿಸಿಆರ್ ಪರೀಕ್ಷೆಗೆ ಹುಬ್ಬಳಿಯ ಪ್ರಯೋಗಾಲಯಕ್ಕೆ ಮಾದರಿಯನ್ನು ಕಳುಹಿಸಲಾಗಿತ್ತು. ವೈದ್ಯಕೀಯ ಮಾರ್ಗದರ್ಶನವನ್ನು ಕಡೆಗಣಿಸಿ, ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಅವರಿಗೆ ಕೋವಿಡ್ ಮಾರ್ಗಸೂಚಿಗಳ ಅನುಸಾರ ಚಿಕಿತ್ಸೆ ಒದಗಿಸಿ, ರೋಗಿಯ ಸ್ಥಿತಿಗತಿ ಮೇಲೆ ನಿಗಾ ಇರಿಸಲಾಗಿತ್ತು. ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ಹೇಳಿದೆ.
ರಾಜ್ಯದಲ್ಲಿ ಗುರುವಾರ 42 ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ಈ ವರ್ಷ ವರದಿಯಾದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 253ಕ್ಕೆ ಏರಿಕೆಯಾಗಿದೆ. ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಏರಿಕೆ ಮಾಡಲಾಗಿದ್ದು, 24 ಗಂಟೆಗಳ ಅವಧಿಯಲ್ಲಿ 513 ಮಾದರಿಗಳ ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇಕಡ 8.18ರಷ್ಟಿದೆ. ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 148ಕ್ಕೆ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.