ADVERTISEMENT

ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆ: ಏ.17ಕ್ಕೆ ಚುನಾವಣೆ, ಮೇ 2ಕ್ಕೆ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2021, 20:15 IST
Last Updated 16 ಮಾರ್ಚ್ 2021, 20:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಏಪ್ರಿಲ್‌ 17ರಂದು ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.

ಮಾರ್ಚ್ 23ರಂದು ಉಪ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ಏಪ್ರಿಲ್‌ 3 ಕೊನೆಯ ದಿನವಾಗಿದೆ.

ಚುನಾವಣೆ ಘೋಷಣೆ ಆದ ದಿನದಿಂದಲೇ ಮಾದರಿ ನೀತಿಸಂಹಿತೆ ಜಾರಿಯಲ್ಲಿರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ನಿಧನದಿಂದ ಬೆಳಗಾವಿ ಲೋಕಸಭೆ ಕ್ಷೇತ್ರ ತೆರವಾಗಿದೆ.

ಪ್ರತಾಪಗೌಡ ಪಾಟೀಲ ಅವರ ರಾಜೀನಾಮೆಯಿಂದ ಮಸ್ಕಿ ವಿಧಾನಸಭೆ ಕ್ಷೇತ್ರ ಮತ್ತು ಶಾಸಕ ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರ ತೆರವಾಗಿವೆ.

ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂಧಗಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿಲ್ಲ.

ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಕ್ಷೇತ್ರ ಹಾಗೂ ವಿವಿಧ ರಾಜ್ಯಗಳ ಇತರ 12 ವಿಧಾನಸಭೆ ಕ್ಷೇತ್ರಗಳಿಗೂ ಏಪ್ರಿಲ್‌ 17ರಂದೇ ಉಪ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.