ಬೆಂಗಳೂರು: ‘ಮತ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಅವಕಾಶವಾಗಲೀ ಅಥವಾ ಅಧಿಕಾರವಾಗಲೀ ಇಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಸಂಬಂಧ ಯಾದಗಿರಿ ಜಿಲ್ಲೆಯ ಶಹಾಪೂರ ತಾಲ್ಲೂಕಿನ ಗೋಗಿ ಗ್ರಾಮದ ಸೈಯದ್ ಖಲೀಲುಲ್ಲಾ ಹುಸೇನಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಜಾಕಾಲದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಆರ್.ದೇವದಾಸ್ ಮತ್ತು ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರಿದ್ದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು.
ಕೇಂದ್ರ ಚುನಾವಣಾ ಆಯೋಗದ ಪರ ಹಾಜರಿದ್ದ ಹೈಕೋರ್ಟ್ ವಕೀಲ ಶರತ್ ದೊಡವಾಡ ಅವರು ಆಕ್ಷೇಪಣೆ ಸಲ್ಲಿಸಿ, ‘ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಜನಪ್ರತಿನಿಧಿಗಳ ಕಾಯ್ದೆ–1951ರ ಕಲಂ 123(5) ಅಡಿಯಲ್ಲಿ ಆಯೋಗಕ್ಕೆ ನಿರ್ಬಂಧವಿದೆ. ಒಂದೊಮ್ಮೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದರೆ ಅದು ಕೆಟ್ಟ ರೂಢಿಯಾಗುತ್ತದೆ. ಹಾಗಾಗಿ, ಅರ್ಜಿದಾರರ ಮನವಿ ಪರಿಗಣಿಸಲಾಗದು. ಅಂತೆಯೇ, ಅರ್ಜಿ ಸಲ್ಲಿಕೆಯಾದ ನಂತರ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿದ್ದ 160 ಮತಗಟ್ಟೆಗಳನ್ನು 195ಕ್ಕೆ ಹೆಚ್ಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಆಯೋಗವು ಸಲ್ಲಿಸಿರುವ ಆಕ್ಷೇಪಣೆಯಲ್ಲಿ ಅರ್ಜಿದಾರರು ಕೋರಿರುವ ಎರಡು ಮನವಿಗಳಿಗೂ ಉತ್ತರ ದೊರತಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಿಲೇವಾರಿ ಮಾಡಿತು.
‘ಪ್ರಸಕ್ತ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಮತದಾನ ಮಾಡಲು ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಮತ್ತು ಮತಗಟ್ಟೆಗಳ ಸಂಖ್ಯೆಯನ್ನು 160 ರಿಂದ 250ಕ್ಕೆ ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.