
ಬೆಳಗಾವಿ: ‘ಮತ ಕಳ್ಳತನ ವಿರುದ್ಧದ ಹೋರಾಟದಲ್ಲಿ ಭಾಗವಹಿಸಲು ಶನಿವಾರ (ಡಿ.13) ದೆಹಲಿಗೆ ತೆರಳುತ್ತಿದ್ದೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಲೋಕಸಭೆ ಚುನಾವಣೆ ಸಮಯದಲ್ಲಿ ಆಗಿರುವ ಮತ ಕಳ್ಳತನವನ್ನು ರಾಹುಲ್ ಗಾಂಧಿ ಅವರು ಸಾಕ್ಷ್ಯಸಹಿತ ಜನರ ಮುಂದಿಟ್ಟಿದ್ದಾರೆ. ಚುನಾವಣಾ ಆಯೋಗವು ನಿರ್ದಿಷ್ಟ ರಾಜಕೀಯ ಪಕ್ಷದ ಅಸ್ತ್ರವಾಗಿದ್ದು, ನಾವು ಅದರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ’ ಎಂದರು.
‘2023ರಲ್ಲೇ ನಾವು ಚಿಲುಮೆ ಅಕ್ರಮದ ಮೂಲಕ ಮತ ಕಳ್ಳತನವನ್ನು ಪತ್ತೆ ಮಾಡಿದ್ದೆವು. ನಾನು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೆಲ್ಲರೂ ಚುನಾವಣಾ ಆಯೋಗಕ್ಕೆ ದೂರು ನೀಡಿ ಹೋರಾಟ ಮಾಡಿದೆವು. ಮತಕಳವು ವಿಚಾರವಾಗಿ ರಾಜ್ಯದಲ್ಲಿ ನಡೆಸಿದ ಸಹಿ ಸಂಗ್ರಹ ಅಭಿಯಾನದಲ್ಲಿ 1.43 ಕೋಟಿ ಸಹಿ ಸಂಗ್ರಹವಾಗಿದೆ’ ಎಂದರು.
ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ‘ಮುಂದೆ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
‘ಈ ವಿಚಾರದಲ್ಲಿ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರ ಸಮಿತಿಯ ಶಿಫಾರಸುಗಳನ್ನು ಗೌರವಿಸಬೇಕು. ಈ ಕುರಿತ ಮುಂಜಾಗ್ರತಾ ಕ್ರಮಗಳ ಜವಾಬ್ದಾರಿಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ವಹಿಸಲಾಗಿದೆ. ಗೃಹ ಸಚಿವರು, ಕೆಎಸ್‌ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರ ತಂಡ ಮತ್ತು ಪೊಲೀಸ್ ಅಧಿಕಾರಿಗಳು ಕುಳಿತು ಚರ್ಚೆ ಮಾಡಲಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.