
ಪ್ರಿಯಾಂಕ್ ಖರ್ಗೆ
ಬೆಂಗಳೂರು: 2023ರ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಜಾರಿ ಮಾಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಅಶ್ವತ್ಥರಾಮ್ ರಾಥೋಡ್ ಎಂಬವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ನ್ಯಾಯ ಮೂರ್ತಿಗಳಾದ ಎಂ. ಎಂ. ಸುಂದರೇಶ್ ಹಾಗೂ ಸತೀಶ್ ಚಂದ್ರ ಶರ್ಮಾ ಅವರ ಪೀಠವು ಸೋಮವಾರ ವಿಚಾರಣೆ ನಡೆಸಿತು.
ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವುದಲ್ಲದೇ, ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ವಿಧಾನ ಸಭೆ ಚುನಾವಣೆಯಲ್ಲಿ ಗೆದ್ದಿರುವ ಪ್ರಿಯಾಂಕ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಿಯಾಂಕ್ ಅವರು ಪರಿಶಿಷ್ಟ ಜಾತಿ ಪ್ರಮಾಣಪತ್ರದ ಬದಲು ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅದೂ 2021ರ ಪ್ರಮಾಣ ಪತ್ರವಾಗಿದೆ. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆಯೂ ಅಸಮರ್ಪಕ ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಇದಲ್ಲದೆ, ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿದ್ದು, ಇದು ಲಂಚ ಹಾಗೂ ಭ್ರಷ್ಟಾಚಾರಕ್ಕೆ ಸಮ ಎಂದೂ ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.