ADVERTISEMENT

ಚುನಾವಣೆ ಮುಂದೂಡಿಕೆ ನಿರ್ಧಾರ ಸಮರ್ಥನೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 18:09 IST
Last Updated 13 ಆಗಸ್ಟ್ 2021, 18:09 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಡಿಸೆಂಬರ್ ಅಂತ್ಯದ ತನಕ ಮುಂದೂಡಲು ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರವನ್ನು ಸರ್ಕಾರ ಹೈಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿದೆ.

ಕಾಲಮಿತಿಯಲ್ಲಿ ಚುನಾವಣೆ ನಡೆಸಲು ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಮೇ 17ರಂದು ಈ ನಿರ್ಣಯ ಕೈಗೊಳ್ಳಲಾಗಿದ್ದು, ಆ ಸಂದರ್ಭದಲ್ಲಿ ದಿನಕ್ಕೆ 40 ಸಾವಿರ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದವು’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಎಸ್. ನಾವಡಗಿ ವಿವರಿಸಿದರು.

ADVERTISEMENT

ಅಂತಹ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಕಷ್ಟ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೀಸಲಾತಿ ಪಟ್ಟಿ ಸೇರಿ ನ್ಯಾಯಾಲಯದ ನಿರ್ದೇಶನದಂತೆ ಎಲ್ಲಾ ರೀತಿಯ ನೆರವನ್ನು ಸರ್ಕಾರ ಆಯೋಗಕ್ಕೆ ನೀಡುತ್ತಿದೆ ಎಂದು ವಿವರಿಸಿದರು.

ಆಯೋಗದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು, ‘ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರಸಭೆ ಮತ್ತು ತರೀಕೆರೆ ಪುರಸಭೆ ಚುನಾವಣೆಗೆ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟಿಸಲಾಗಿದೆ’ ಎಂದ ತಿಳಿಸಿದರು.

‘ಸರ್ಕಾರ ಶಿಫಾರಸು ಮಾಡಬಹುದು, ಚುನಾವಣೆ ಮುಂದೂಡುವುದು ಅಥವಾ ನಡೆಸುವುದು ಆಯೋಗಕ್ಕೆ ಬಿಟ್ಟ ವಿಚಾರ’ ಎಂದು ತಿಳಿಸಿದ ಪೀಠ, ವಿಚಾಣೆಯನ್ನು ಸೆ.14ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.