ಬೆಂಗಳೂರು: ‘ಠಿಕಾಣಿಯೇ ಇಲ್ಲದ, ಕಿಂಚಿತ್ತೂ ಅಪರಾಧಿಕ ಅಂಶಗಳನ್ನೇ ಒಳಗೊಳ್ಳದ, ನೋಡುತ್ತಿದ್ದಂತೆಯೇ ಇದೊಂದು ಅರ್ಥಹೀನ ಎನ್ನಿಸುವಂತಹ ಈ ಕ್ರಿಮಿನಲ್ ದೂರಿನಲ್ಲಿ ಯಾವುದೇ ಹುರುಳಿಲ್ಲ’ ಎಂದು ಅರ್ಜಿದಾರರ ನಡೆಯನ್ನು ತೀಕ್ಷ್ಣವಾಗಿ ಕುಟುಕಿರುವ ಹೈಕೋರ್ಟ್, ‘ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು (ಇ.ಡಿ) ದುರ್ಬಳಕೆ ಮಾಡಿಕೊಂಡ ಆರೋಪದಡಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ತಿಲಕ್ ನಗರ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸಿದೆ.
ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ನಳಿನ್ ಕಮಾರ್ ಕಟೀಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು, ‘ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮಂಗಳವಾರ ಪ್ರಕಟಿಸಿದರು.
ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್, 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರ ಆದೇಶದ ಅನುಸಾರ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸುವಂತೆ ನ್ಯಾಯಪೀಠ ಆದೇಶಿಸಿದೆ.
ಅರ್ಜಿದಾರ ಆದರ್ಶ್ ಅಯ್ಯರ್ ಪರ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, ‘ದೂರುದಾರರ ಆರೋಪಗಳನ್ನು ಗಮನಿಸಿದರೆ ಇದು ಸುಲಿಗೆಗೆ ಅತ್ಯುತ್ತಮ ಉದಾಹರಣೆ ಎನಿಸಿದೆ. ಸುಲಿಗೆಗೆ ಗುರಿಯಾಗಿರುವ ವ್ಯಕ್ತಿಯೂ ಅಪರಾಧದಿಂದ ಲಾಭ ಪಡೆದಿದ್ದಾರೆ. ಬಿಜೆಪಿಗೆ ಚುನಾವಣಾ ಬಾಂಡ್ ಮೂಲಕ ದೇಣಿಗೆ ನೀಡಿದ ಬಳಿಕ ಇ.ಡಿ ಅಂಥವರ ವಿರುದ್ಧ ಆದಾಯ ತೆರಿಗೆ ಇಲಾಖೆಯ ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಕಾರಣಕ್ಕಾಗಿ ಅವರು ದೂರು ನೀಡಿಲ್ಲ. ಶ್ರೀಸಾಮಾನ್ಯರೇ ಈ ಸಂಬಂಧ ದೂರು ನೀಡಬಹುದು’ ಎಂದು ಮಂಡಿಸಿದ್ದ ವಾದವನ್ನು ನ್ಯಾಯಪೀಠ ತಳ್ಳಿ ಹಾಕಿದೆ.
‘ಈ ಪ್ರಕರಣದಲ್ಲಿ ಸಂತ್ರಸ್ತರ್‍ಯಾರೂ ನಮಗೆ ಅನ್ಯಾಯವಾಗಿದೆ ಎಂದು ಕೋರ್ಟ್ ಮೆಟ್ಟಿಲೇರಿಲ್ಲ. ದೂರುದಾರ ಆದರ್ಶ ಅಯ್ಯರ್ ಅವರಿಗಂತೂ ಯಾವುದೇ ಹಾನಿಯಾಗಿಲ್ಲ. ಹೀಗಾಗಿ, ಸುಲಿಗೆ ನಡೆದಿದೆ ಎಂಬ ಅಯ್ಯರ್ ಆರೋಪ ಮೇಲ್ನೋಟಕ್ಕೆ ಆಧಾರರಹಿತವಾಗಿದೆ. ಅಂತೆಯೇ, ಭಾರತೀಯ ದಂಡ ಸಂಹಿತೆ–1860ರ ಕಲಂ 384ರ ವ್ಯಾಖ್ಯಾನವು ಪ್ರತಿಯೊಂದು ಪ್ರಕರಣದ ವಾಸ್ತವಿಕ ವಿಚಾರದ ಮೇಲೆ ಬದಲಾಗುವುದಿಲ್ಲ. ಕೇವಲ ರಂಜನೆಗಾಗಿ ಪ್ರಕರಣ ದಾಖಲಿಸುವ ನಡೆ ಒಪ್ಪತಕ್ಕದ್ದಲ್ಲ’ ಎಂಬ ಕಟೀಲ್ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ಮಂಡಿಸಿದ್ದ ವಾದವನ್ನು ನ್ಯಾಯಪೀಠ ಎತ್ತಿ ಹಿಡಿದಿದೆ.
‘ಜನಾಧಿಕಾರ ಸಂಘರ್ಷ ಪರಿಷತ್’ ಸಹ ಅಧ್ಯಕ್ಷ ಆದರ್ಶ ಅಯ್ಯರ್ ಸಲ್ಲಿಸಿದ್ದ ಖಾಸಗಿ ದೂರಿನಲ್ಲಿ 1ನೇ ಆರೋಪಿಯಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, 2ನೇ ಆರೋಪಿಯಾಗಿ ಇ.ಡಿ ಅಧಿಕಾರಿ, 3ನೇ ಆರೋಪಿಯಾಗಿ ಬಿಜೆಪಿ ಘಟಕದ ಪದಾಧಿಕಾರಿಗಳು, 4ನೇ ಆರೋಪಿಯಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಇತರರ ವಿರುದ್ಧ ದೂರು ದಾಖಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.