ಬೆಂಗಳೂರು: 68 ಪರಿಸರ ಸ್ನೇಹಿ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೋಮವಾರ) ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು. ಪರಿಸರ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಲಾಂಛನ ಬಿಡುಗಡೆ ಮಾಡಿದರು.
ಸಿಎಂಗೆ ಇವಿ ಕಾರು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಓಡಾಡಲು ಶೀಘ್ರದಲ್ಲಿಯೇ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಕಾರು ಒದಗಿಸಲಾಗುವುದು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ತಿಳಿಸಿದರು.
‘ಮುಖ್ಯಮಂತ್ರಿಯವರಿಗೆ ಕಾರು ಒದಗಿಸಿದ ಬಳಿಕ ಅರಣ್ಯ ಸಚಿವ ಖಂಡ್ರೆಯವರಿಗೆ ಇವಿ ಕಾರು ನೀಡಲಾಗುವುದು. ಮುಂದೆ ಹಂತಹಂತವಾಗಿ ಎಲ್ಲ ಸಚಿವರು, ಅಧಿಕಾರಿಗಳೂ ಇವಿ ಕಾರುಗಳಲ್ಲಿಯೇ ಓಡಾಡುವಂತೆ ಮಾಡುವುದು ನಮ್ಮ ಉದ್ದೇಶ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ, ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್‌ಖಾನ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.