ಬೆಂಗಳೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಮತ್ತು ಜಲಜೀವನ್ ಮಿಷನ್ ಯೋಜನೆ ಅಡಿ ಕುಡಿಯುವ ನೀರು ಒದಗಿಸಲು ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ.
ಇಲ್ಲಿನ ಬುಡಕಟ್ಟು ವಾಸಿಗಳಿಗೆ ವಿದ್ಯುತ್ ಮತ್ತು ಕುಡಿಯುವ ನೀರು ಪೂರೈಕೆ ಮಾಡಬೇಕು ಎಂಬ ಕೂಗು ಬಹಳ ದಿನಗಳಿಂದಲೂ ಕೇಳಿ ಬಂದಿತ್ತು. ಇದಕ್ಕೆ ಪೂರಕವಾಗಿ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಸಮ್ಮತಿ ನೀಡಲಾಗಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಗೆ ಬರುವ ಹನೂರು ತಾಲ್ಲೂಕಿನ ಏಳು ಗ್ರಾಮಗಳು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಅಭಯಾರಣ್ಯದ ವ್ಯಾಪ್ತಿಯ ಸುಮಾರು ಹತ್ತು ಗ್ರಾಮಗಳಲ್ಲಿನ ಹಾಡಿಗಳಿಗೆ ಈ ಸೌಲಭ್ಯ ಸಿಗಲಿದೆ. ಈ ಯೋಜನೆಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಜಾರಿ ಆಗಲಿವೆ ಎಂದು ಮೂಲಗಳು ಹೇಳಿವೆ.
ಹುಲಿ ಸಂರಕ್ಷಿತ ಪ್ರದೇಶ ಮತ್ತು ಇತರ ವನ್ಯಜೀವಿಗಳ ಅಭಯಾರಣ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಾರದು. ಇದರಿಂದ ವನ್ಯಜೀವಿಗಳ ಜೀವನ ವ್ಯವಸ್ಥೆಗೆ ಭಂಗಬರುತ್ತದೆ ಎಂದು ವನ್ಯಜೀವಿ ಪ್ರೇಮಿಗಳು ಆಕ್ಷೇಪ ವ್ಯಕ್ತಪಡಿಸುತ್ತಾ ಬಂದಿದ್ದಾರೆ. ಇದೀಗ ವಿದ್ಯುತ್ ಮತ್ತು ನೀರು ಕೊಡಲು ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.