ADVERTISEMENT

₹250 ಕೋಟಿ ಅನುದಾನ ಪ್ರವಾಹ ನೆರವಿಗೆ

ಎಲಿವೇಟೆಡ್ ಕಾರಿಡಾರ್‌ಗೆ ಮಂಜೂರಾಗಿದ್ದ ಹಣ ಬಳಸಲು ಕೆಆರ್‌ಡಿಸಿಎಲ್‌ ಸಭೆಯಲ್ಲಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2019, 19:53 IST
Last Updated 7 ಸೆಪ್ಟೆಂಬರ್ 2019, 19:53 IST
   

ಬೆಂಗಳೂರು: ನಗರದ ವ್ಯಾಪ್ತಿಯಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಎಲಿವೇಟೆಡ್‌ ಕಾರಿಡಾರ್‌ಗೆ ಮಂಜೂರಾಗಿದ್ದ ಅನುದಾನದಲ್ಲಿ ₹250 ಕೋಟಿ ಅನುದಾನವನ್ನು ಪ್ರವಾಹ ಪರಿಹಾರ ಕಾಮಗಾರಿಗೆ ಬಳಸಿಕೊಳ್ಳಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್‌) ಆಡಳಿತ ಮಂಡಳಿ ನಿರ್ಧರಿಸಿದೆ.

ಲೋಕೋಪಯೋಗಿ ಸಚಿವ ಗೋವಿಂದ ಎಂ. ಕಾರಜೋಳ ನೇತೃತ್ವದಲ್ಲಿ ಶನಿವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಲು ಎಲಿವೇಟೆಡ್‌ ಕಾರಿಡಾರ್ ಕಾಮಗಾರಿಗೆ ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ₹1 ಸಾವಿರ ಕೋಟಿ ಬಿಡುಗಡೆ ಮಾಡುವ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ, ₹750 ಕೋಟಿ ಬಿಡುಗಡೆಯಾಗಿತ್ತು. ಈ ಪೈಕಿ ಒಂದು ಪ್ಯಾಕೇಜ್‌ನ ಟೆಂಡರ್‌ ಪ್ರಕ್ರಿಯೆ ಜಾರಿಯಲ್ಲಿತ್ತು.

ADVERTISEMENT

ಬೆಂಗಳೂರು ಮಹಾನಗರ ಯೋಜನಾ ಸಮಿತಿಯಲ್ಲಿ (ಬಿಎಂಪಿಸಿ) ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರನ್ನು ಸೇರ್ಪಡೆ ಮಾಡಿರುವುದರ ಕಾನೂನಿನ ಸಿಂಧುತ್ವ ಪ್ರಶ್ನಿಸಿ, ‘ನಮ್ಮ ಬೆಂಗಳೂರು ಫೌಂಡೇಷನ್‌’ ಮತ್ತು ‘ಸಿಟಿಜನ್ಸ್‌ ಆ್ಯಕ್ಷನ್‌ ಫೋರಂ’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್‌ನ ವಿಭಾಗೀಯ ಪೀಠವು, ‘ಈ ಯೋಜನೆಗೆ ಸಂಬಂಧಿಸಿದ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಬಾರದು’ ಎಂದು ಆದೇಶ ಮಾಡಿತ್ತು.

‘ಈ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಅಡಿ ಮೀಸಲಿಡಬೇಕಾದ ಅನುದಾನವನ್ನು ನೆರೆಪೀಡಿತ
ಪ್ರದೇಶಗಳಲ್ಲಿರುವ ಈ ಸಮುದಾಯಗಳ ಸಂತ್ರಸ್ತರಿಗೆ ಸೂರು ಕಲ್ಪಿಸಲು ಬಳಸಿಕೊಳ್ಳಲು ಕೆಆರ್‌ಡಿಸಿಎಲ್‌ ಆಡಳಿತ ಮಂಡಳಿ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಈ ಯೋಜನೆಗೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಈ ಯೋಜನೆಯ ಪ್ರಸ್ತುತತೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.

‘ನಗರಕ್ಕೆ ಇಂತಹ ಯೋಜನೆಯ ಅಗತ್ಯವಿದೆ. ಆದರೆ, ಈ ಬಗ್ಗೆ ಏಕಾಏಕಿ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಜೊತೆ ಸಮಾಲೋಚನೆ ನಡೆಸಿ, ನಂತರ ಮುಂದುವರಿಯಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು’ ಎಂದು ಅಧಿಕಾರಿ ತಿಳಿಸಿದರು.

‘ಈ ಹಿಂದೆ ನಗರದ ವ್ಯಾಪ್ತಿಯಲ್ಲಿ ಕೆಲವು ಭಾರಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಆದರೆ, ಆರ್ಥಿಕ ಸಂಪನ್ಮೂಲದ ಕೊರತೆಯಿಂದಾಗಿ ಅವುಗಳ ಅನುಷ್ಠಾನ
ಇನ್ನೂ ಸಾಧ್ಯವಾಗಿಲ್ಲ. ಹಾಗಾಗಿ ಎಲಿವೇಟೆಡ್‌ ಕಾರಿಡಾರ್‌ ಯೋಜನೆಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣದ ಸಾಧ್ಯತೆ ಬಗ್ಗೆ ಮೊದಲು ಪರಿಶೀಲಿಸಬೇಕಿದೆ. ಹೀಗಾಗಿ ತರಾತುರಿಯ ತೀರ್ಮಾನ ಬೇಡ’ ಎಂದು ಕೆಲವು ಅಧಿಕಾರಿಗಳು ಸಲಹೆ ನೀಡಿದರು.

‘ಸಾರ್ವಜನಿಕ ಆಸ್ತಿಯಾಗಿ ರೂಪುಗೊಳ್ಳುವ ಕಾಮಗಾರಿಗಳನ್ನು ಮಾತ್ರ ಕೈಗೆತ್ತಿಕೊಳ್ಳಬೇಕು. ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ರಸ್ತೆಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು’ ಎಂದು ಸಚಿವ ಕಾರಜೋಳ ಅವರು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಕೊಳವೆಮಾರ್ಗ, ‌ಕೇಬಲ್ ಅಳವಡಿಸಲು ರಸ್ತೆಗಳನ್ನು ಅಗೆದು ಹಾಳು ಮಾಡಲಾಗುತ್ತಿದೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಉತ್ತಮ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ರಸ್ತೆಗಳನ್ನು ಚೆನ್ನಾಗಿ ನಿರ್ವಹಣೆ ಮಾಡಬೇಕು. ಅನಗತ್ಯ ವಿಳಂಬ ಮಾಡಿದರೆ ವೆಚ್ಚವೂ ಹೆಚ್ಚುತ್ತದೆ. ಇದಕ್ಕೆ ಅವಕಾಶ ನೀಡಬಾ
ರದು’ ಎಂದು ಸಲಹೆ ನೀಡಿದರು.

ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಗುರುಪ್ರಸಾದ್, ಮೂಲಸೌಕರ್ಯಗಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಹಣಕಾಸು ಇಲಾಖೆಯ ಕಾರ್ಯದರ್ಶಿ ಪಿ.ಸಿ.ಜಾಫರ್, ಕೆ–ಶಿಪ್ ಮುಖ್ಯ ಯೋಜನಾಧಿಕಾರಿ ಕೃಷ್ಣ ರೆಡ್ಡಿ, ಕೆಆರ್‌ಡಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳು ಭಾಗವಹಿಸಿದರು.

₹ 26 ಸಾವಿರ ಕೋಟಿ:ಎಲಿವೇಟೆಡ್‌ ಕಾರಿಡಾರ್‌ ಯೋಜನೆಯ ಅಂದಾಜು ವೆಚ್ಚ

₹ 1000 ಕೋಟಿ: ಈ ಯೋಜನೆಗೆ ಸರ್ಕಾರ 2019–20 ನೇ ಸಾಲಿನ ಬಜೆಟ್‌ನಲ್ಲಿ ಮಂಜೂರು ಮಾಡಿದ್ದ ಅನುದಾನ

₹ 750 ಕೋಟಿ: ಯೋಜನೆಗೆ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.