
ಬೆಂಗಳೂರು: ನರೇಗಾ ಯೋಜನೆ ಹಾಗೂ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಬಹಿರಂಗ ಚರ್ಚೆಗೆ ಬರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಂಥಾಹ್ವಾನ ನೀಡಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಯುಪಿಎ ಸರ್ಕಾರದ ಅವಧಿಯಲ್ಲಿ ನರೇಗಾ ಯೋಜನೆಯಲ್ಲಿ ₹11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂಬ ಜೋಶಿ ಅವರ ಹೇಳಿಕೆ ಆಧಾರ ರಹಿತವಾಗಿದೆ. ಈ ಕುರಿತು ಬಹಿರಂಗ ಚರ್ಚೆಗೆ ಬರಬೇಕು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ ಸೇರಿದಂತೆ ಯಾರಾದರೂ ಒಬ್ಬರು ಮಾಧ್ಯಮ ವೇದಿಕೆಗೆ ಬಂದು ಚರ್ಚೆ ಮಾಡಲಿ’ ಎಂದು ಸವಾಲು ಹಾಕಿದರು.
‘ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ಸಿಬಿಐ ತನಿಖೆಗೆ ಒಪ್ಪಿಸಬೇಕು. ತಾಕತ್ತಿದ್ದರೆ ಈಗಲೂ ತನಿಖೆ ಮಾಡಿಸಲಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ಇಂತಹ ಆರೋಪ ಮಾಡಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.
‘ನರೇಗಾ ವಿಚಾರ ಚರ್ಚಿಸಲು ಎರಡು ದಿನಗಳ ವಿಶೇಷ ಅಧಿವೇಶನ ಕರೆಯಲಾಗುವುದು. ಬಿಜೆಪಿ ನಾಯಕರು ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಅಭಿಯಾನ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅವರ ಕಾರ್ಯಕ್ರಮದ ಕುರಿತು ಅವರು ಸಮರ್ಥನೆ ಮಾಡಿಕೊಳ್ಳಲಿ, ಯೋಜನೆಯ ವ್ಯತಿರಿಕ್ತ ಪರಿಣಾಮಗಳನ್ನು ಕಾಂಗ್ರೆಸ್ ಜನರಿಗೆ ಮನವರಿಕೆ ಮಾಡಿಕೊಡಲಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.