ADVERTISEMENT

ಹಳ್ಳಿಗಳಲ್ಲೇ ಸಿಗಲಿದೆ ಉದ್ಯೋಗ: ಸಿಎಂ ಬಿ.ಎಸ್. ಯಡಿಯೂರಪ್ಪ ಭರವಸೆ

ವಲಸಿಗ ಕಾರ್ಮಿಕರಿಗೆ ಮನರೇಗಾದಡಿ ಉದ್ಯೋಗ

​ಪ್ರಜಾವಾಣಿ ವಾರ್ತೆ
Published 20 ಮೇ 2020, 8:11 IST
Last Updated 20 ಮೇ 2020, 8:11 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಕಾರಣಕ್ಕೆ ವಲಸಿಗ ಕಾರ್ಮಿಕರು ಬಹಳ ಸಂಖ್ಯೆಯಲ್ಲಿ ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದು, ಅವರಿಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಈ ವಿಷಯ ತಿಳಿಸಿದರು.

2020-21ನೇ ಸಾಲಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ 13 ಕೋಟಿ ಮಾನವ ದಿನಗಳ ಸೃಜನೆಯ ಗುರಿ ಹಾಗೂ ₹6315.79 ಕೋಟಿ ಅನುದಾನ ನಿಗದಿ ಪಡಿಸಲಾಗಿದೆ. ಇದಲ್ಲದೆ ಕೇಂದ್ರ ಸರ್ಕಾರವೂ ಉದ್ಯೋಗ ಖಾತರಿ ಯೋಜನೆಗೆ ₹40 ಸಾವಿರ ಕೋಟಿ ಹೆಚ್ಚುವರಿ ಅನುದಾನ ನಿಗದಿ ಪಡಿಸಿರುವ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರಿಗೆ ಉದ್ಯೋಗ ದೊರೆಯುವಂತೆ ಹಾಗೂ ನಿಗದಿತ ಅವಧಿಯಲ್ಲಿ ವೇತನ ಪಾವತಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ADVERTISEMENT

ಕೋವಿಡ್-19 ನಿರ್ವಹಣೆಗೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ಜನ ಜಾಗೃತಿ ಮೂಡಿಸುವುದು ಲಾಕ್‌ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳ ಮನೆ ಬಾಗಿಲಿಗೆ ವಿತರಣೆ, ಸೌಲಭ್ಯಗಳ ವಿತರಣೆ, ಮನೆ ಮನೆ ಭೇಟಿ ನೀಡಿ ಹೋಮ್ ಕ್ವಾರಂಟೈನ್ ಪರಿಶೀಲನೆ, ದೈನಂದಿನ ಮಾಹಿತಿ ಸಂಗ್ರಹ, ಸಾಂಸ್ಥಿಕ ಕ್ವಾರಂಟೈನ್ ನಿರ್ವಹಣೆ ಮೇಲ್ವಿಚಾರಣೆ ವಹಿಸುತ್ತಿದೆ. ಇದಲ್ಲದೆ, ಸ್ವಸಹಾಯ ಸಂಘಗಳು 8 ಲಕ್ಷ ಮಾಸ್ಕ್ ತಯಾರಿಸಿ ವಿತರಿಸುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರಲ್ಲಿ ಆತ್ಮವಿಶ್ವಾಸ ಮೂಡಿಸಲು ಸಾಧ್ಯವಾಗಿರುವ ಕುರಿತು ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಕುಡಿಯುವ ನೀರು: ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸುವಂತೆ ನಿರ್ದೇಶನ ನೀಡಿದರು. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಇರುವ 14 ಜಿಲ್ಲೆಗಳಲ್ಲಿ 659 ಗ್ರಾಮಗಳಲ್ಲಿ 389 ಟ್ಯಾಂಕರ್ ಮತ್ತು 706 ಖಾಸಗಿ ಬೋರ್ ವೆಲ್ ಗಳಿಂದ ನೀರು ಪೂರೈಕೆ ಆಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ, ರಾಜ್ಯ ಸರ್ಕಾರದ ಜಲಧಾರೆ ಯೋಜನೆ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.