ಬೆಂಗಳೂರು: ಹೊಸ ವಿದ್ಯುತ್ ಸಂಪರ್ಕಕ್ಕೆ ರೈತರಿಗೆ ನೀಡುತ್ತಿದ್ದ ಸಬ್ಸಿಡಿ ಸ್ಥಗಿತಗೊಳಿಸಿರುವ ರಾಜ್ಯ ಸರ್ಕಾರ ರೈತದ್ರೋಹಿ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ದೀಪಾವಳಿ ಸಮಯದಲ್ಲಿ ಕಾಂಗ್ರೆಸ್ ರೈತರ ಮೇಲೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟ ರೈತರಿಗೆ ಮತ್ತೊಂದು ಬರೆ ಎಳೆದಿದೆ. ವಿದ್ಯುತ್ ಪರಿವರ್ತಕ, ವಿದ್ಯುತ್ ಕಂಬ, ತಂತಿ ಎಳೆಯಲು ಸರ್ಕಾರ ಸಬ್ಸಿಡಿ ಕೊಡುತ್ತಿತ್ತು. ತಮ್ಮ ಪಾಲಿನ ₹24 ಸಾವಿರ ಭರಿಸಲು ರೈತರು ಪರದಾಡುತ್ತಿದ್ದರು. ಈಗ ಇನ್ನಷ್ಟು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದಿದ್ದಾರೆ.
ಸರ್ಕಾರ ಆದೇಶ ವಾಪಸ್ ಪಡೆಯಬೇಕು. ಮೊದಲಿನಂತೆ ರೈತರಿಗೆ ಸಬ್ಸಿಡಿ ಕೊಡಬೇಕು. ಇಲ್ಲದಿದ್ದರೆ ಜೆಡಿಎಸ್ ಪಕ್ಷ ಸದನದ ಒಳಗೆ, ಹೊರಗೆ ಹೋರಾಟಕ್ಕೆ ಇಳಿಯುತ್ತದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.