ADVERTISEMENT

ಇಂಗ್ಲಿಷ್‌ ಮಾಧ್ಯಮ: ಹೆಜ್ಜೆ ಹಿಂದಿಕ್ಕಲು ಸರ್ಕಾರ ಚಿಂತನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 20:15 IST
Last Updated 3 ಜನವರಿ 2019, 20:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಇಂಗ್ಲಿಷ್‌ ಮಾಧ್ಯಮ ಶಾಲೆಗಳ ಆರಂಭಕ್ಕೆ ಸಾಂಸ್ಕೃತಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಇಟ್ಟ ಹೆಜ್ಜೆಯಿಂದ ಹಿಂದೆ ಸರಿಯಲು ಸರ್ಕಾರ ಚಿಂತನೆ ನಡೆಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ 1000 ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ಬೋಧನೆ ಆರಂಭಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಜೆಟ್‌ನಲ್ಲಿ ಘೋಷಿಸಿದ್ದರು. ಶಾಲೆ ಆರಂಭಕ್ಕೆ ಸಿದ್ಧತೆ ನಡೆದಿದ್ದು, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ ಎಂದೂ ಅವರು ಇತ್ತೀಚೆಗೆ ನಡೆದ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ತಿಳಿಸಿದ್ದರು.

ಕನ್ನಡ ಶಾಲೆಗಳ ಸಬಲೀಕರಣ, ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸುವ ಬದಲು ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸುವ ಮುಖ್ಯಮಂತ್ರಿ ನಿರ್ಧಾರವನ್ನು ಸಾಹಿತ್ಯ ವಲಯ ವಿರೋಧಿಸಿತ್ತು. ಸಾಹಿತಿಗಳಾದ ಚಂದ್ರಶೇಖರ ಕಂಬಾರ, ಚಂದ್ರಶೇಖರ ಪಾಟೀಲ, ಎಸ್‌.ಎಲ್. ಬೈರಪ್ಪ, ಕಾಳೇಗೌಡ ನಾಗವಾರ, ಸಿದ್ಧಲಿಂಗಯ್ಯ ಮೊದಲಾದವರು ಈ ಕುರಿತು ಸಭೆ ನಡೆಸಿ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದರು. ಸರ್ಕಾರ ನಿಲುವು ಬದಲಿಸದೇ ಇದ್ದರೆ ಗೋಕಾಕ ಮಾದರಿ ಹೋರಾಟ ರೂಪಿಸಬೇಕಾಗುತ್ತದೆ ಎಂದೂ ಎಚ್ಚರಿಸಿದ್ದರು.

ADVERTISEMENT

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಕೂಡ ಈ ಬಗ್ಗೆ ವಿಸ್ತೃತ ಚರ್ಚೆ ನಡೆದಿತ್ತು. ಇಂಗ್ಲಿಷ್‌ ಕಲಿಕೆಯಿಂದ ವಂಚಿತವಾಗಿರುವ ಸಮುದಾಯದ ಪ್ರತಿನಿಧಿಗಳು ಸರ್ಕಾರದ ತೀರ್ಮಾನಕ್ಕೆ ಬೆಂಬಲವಾಗಿ ನಿಂತಿದ್ದರು. ಪರ–ವಿರೋಧದ ಚರ್ಚೆಗೆ ಈ ವಿಷಯ ಕಾರಣವಾಗಿತ್ತು. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸುವ ನಿರ್ಣಯಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಶುಕ್ರವಾರ ಧಾರವಾಡದಲ್ಲಿ ಆರಂಭವಾಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಕಂಬಾರರು, ಇಂಗ್ಲಿಷ್ ಮಾಧ್ಯಮ ಶಾಲೆಗಳ ಆರಂಭಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಭಾಷಣದಲ್ಲೂ ಇದನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ. ‘ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸುವ ಸರ್ಕಾರದ ನಿರ್ಣಯ’ ಸಮ್ಮೇಳನದ ಚರ್ಚೆಯ ಕೇಂದ್ರ ಬಿಂದುವಾಗುವ ಲಕ್ಷಣಗಳು ಗೋಚರಿಸಿವೆ.

ಈ ಬೆಳವಣಿಗೆಗಳ ಮಾಹಿತಿ ಪಡೆದಿರುವ ಮುಖ್ಯಮಂತ್ರಿ, ನಿರ್ಧಾರದಿಂದ ಹಿಂದೆ ಸರಿಯುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊರಬಿದ್ದ ಆದೇಶ: ಪರ–ವಿರೋಧದ ಮಧ್ಯೆಯೇ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸುವ ಕುರಿತು ಸರ್ಕಾರಿ ಆದೇಶ ಹಿಂದಿನ ವರ್ಷದ ಅಕ್ಟೋಬರ್ 26ರಂದು ಹೊರಬಿದ್ದಿದೆ. ಶಿಕ್ಷಣದ ಗುಣಮಟ್ಟ ಸುಧಾರಣೆ ಕಾರ್ಯಕ್ರಮ ಎಂಬ ಲೆಕ್ಕಶೀರ್ಷಿಕೆಯಲ್ಲಿ ₹ 14 ಕೋಟಿ ಅನುದಾನ ನೀಡಲಾಗಿದೆ.

‘ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಆದ್ಯತೆ’

ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸಲು ಸರ್ಕಾರ ಮಾರ್ಗಸೂಚಿಯನ್ನೂ ನೀಡಿದೆ.

ಒಂದನೇ ತರಗತಿಗೆ ಮಾತ್ರ ಇಂಗ್ಲಿಷ್‌ ಮಾಧ್ಯಮ ಆರಂಭಿಸಿ, ಮುಂದಿನ ವರ್ಷಗಳಲ್ಲಿ ಮುಂದಿನ ತರಗತಿಗೆ ವಿಸ್ತರಿಸತಕ್ಕದ್ದು. ಈಗಾಗಲೇ 6 ಮತ್ತು 7ನೇ ತರಗತಿಯಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸಲಾಗುತ್ತಿರುವ ಶಾಲೆಗಳಲ್ಲಿ 1ನೇ ತರಗತಿಯಿಂದ ಪ್ರತ್ಯೇಕವಾಗಿ ಇಂಗ್ಲಿಷ್‌ ತರಗತಿ ಆರಂಭಿಸಲು ಆದ್ಯತೆ ನೀಡಬೇಕು ಎಂದು ಹೇಳಲಾಗಿದೆ.

ಹೆಚ್ಚಿನ ದಾಖಲಾತಿ ಹೊಂದಿರುವ ಗ್ರಾಮೀಣ ಪ್ರದೇಶಗಳಶಾಲೆಗಳಿಗೆ ಆದ್ಯತೆ ನೀಡಬೇಕು.ಇಂಗ್ಲಿಷ್‌ ಬೋಧನೆಯಲ್ಲಿ ಪರಿಣತರಾದ ಶಿಕ್ಷಕರಿಗೆ ಆಯ್ಕೆ ಪರೀಕ್ಷೆ ನಡೆಸಿ, ಇಂಗ್ಲಿಷ್‌ ಮಾಧ್ಯಮ ತರಗತಿಗಳಲ್ಲಿ ಬೋಧಿಸಲು ನಿಯೋಜನೆ ಮಾಡಬೇಕು ಎಂದೂ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.